ಬೆಂಗಳೂರು,ಜು.22- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣದ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಆ. 3 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್‍ರವರು ವಾದ-ವಿವಾದ ಆಲಿಸಿ ನಾಗೇಂದ್ರ ಅವರನ್ನು ಆ.3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜು.10 ರಂದು ಬಂ„ಸಿ ಆರು ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆಗೆ ಪಡೆದಿದ್ದರು. ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಐದು ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಇಂದಿಗೆ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಮತ್ತೆ ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು. ಆರೋಪಿ ಪರ ವಕೀಲರಾದ ಶ್ಯಾಂ ಸುಂದರ್ ಅವರು ನಾಗೇಂದ್ರ ಅವರಿಗೆ ಹೃದಯ ಸಂಬಂಧ ಖಾಯಿಲೆ ಇದೆ. ಅವರಿಗೆ ವೈದ್ಯಕೀಯ ಸಹಾಯ ಬೇಕು, ಜೈಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.