Friday, September 20, 2024
Homeರಾಜ್ಯಆ.6ರವರೆಗೆ ಮಳೆ ಆರ್ಭಟ, ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಆ.6ರವರೆಗೆ ಮಳೆ ಆರ್ಭಟ, ಹಲವು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು, ಆ.1– ರಾಜ್ಯಾದ್ಯಂತ ಕಳೆದೆರಡು ವಾರಗಳಿಂದ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಅಪಾರ ಪ್ರಮಾಣದ ಬೆಳೆ ಹಾನಿಯುಂಟಾಗಿದೆ. ಆಗಸ್ಟ್‌ 6ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೀದರ್‌, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಕೂಡ ಮಳೆಯಾಗಲಿದೆ.

ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ತುಳುಕುತ್ತಿದ್ದು, ಭಾರೀ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದೆ. ಹೊಲ- ಗದ್ದೆಗಳು ಜಲಾವೃತಗೊಂಡಿವೆ. ಭತ್ತ, ಕಬ್ಬು, ಈರುಳ್ಳಿ, ಮೆಣಸಿನಕಾಯಿ, ಹೆಸರುಕಾಳು ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿವೆ.

ಉತ್ತರ ಕನ್ನಡ, ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ತಡರಾತ್ರಿಯವರೆಗೆ ಮಳೆ ಸುರಿದ ಪರಿಣಾಮ ಹಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನರು ಜಾಗರಣೆ ಮಾಡುವಂತಾಗಿದೆ. ಉತ್ತರ ಕನ್ನಡ ಜಿಲ್ಲಾಧ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜೋಯಿಡಾ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಾರವಾರ ನಗರದ ಗ್ರೀನ್‌ ಸ್ಟ್ರೀಟ್‌ ರಸ್ತೆ, ಹೈಚರ್ಚ್‌ ಅಬ್ಬುವಾಡ ರಸ್ತೆ, ಪದನಾಭನಗರ ಸಂಪೂರ್ಣ ಜಲಾವೃತಗೊಂಡಿದೆ.ಅಲ್ಲದೆ, ಅರಗ, ಚಂಡೀಯ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು, ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಮಲೆನಾಡು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಹಲವೆಡೆ ಮಣ್ಣು ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಣಗೆರೆಯಲ್ಲೂ ಕೂಡ ಮಳೆ ಆರ್ಭಟ ಮುಂದುವರೆದಿದೆ. ಜೀವನಡಿ ತುಂಗಭದ್ರಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಹರಿಹರ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೆಲ ಗ್ರಾಮಗಳ ಸೇತುವೆಗಳು ಜಲಾವೃತಗೊಂಡು ಸಂಪರ್ಕ ಖಡಿತಗೊಂಡಿವೆ.

ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷಕ್ಕೂ ಅಧಿಕ ಕ್ಯುಸೆಕ್‌ ನೀರನ್ನು ನದಿಗೆ ಹರಿಸಿದ ಪರಿಣಾಮ ನದಿ ಪಾತ್ರದಲ್ಲಿ ಇರುವ ಜಮೀನುಗಳು ಜಲಾವೃತಗೊಂಡು ತೆಂಗು- ಅಡಿಕೆ, ಭತ್ತದ ಗದ್ದೆಗಳು ಮುಳುಗಡೆಯಾಗಿವೆ. ಮೆಕ್ಕೆ ಜೋಳದ ತೆನೆ ಮೊಳಕೆಯೊಡೆಯುವ ಮುನ್ನ ಸಸಿಗಳು ನೆಲಕಚ್ಚಿವೆ. ನದಿ ನೀರು ವಾರಗಟ್ಟಲೆ ಅಡಿಕೆ ತೋಟದಲ್ಲಿ ನಿಂತರೆ ಅಡಿಕೆ ಗಿಡದ ಕಾಂಡಗಳು ಕೊಳೆಯುವ ಆತಂಕ ಎದುರಾಗಿದೆ.

RELATED ARTICLES

Latest News