Saturday, January 10, 2026
Homeರಾಜಕೀಯಭೂ ಕಬ್ಜ-ಒತ್ತುವರಿ ಮಾಡುವುದರಲ್ಲಿ ನಿಮ್ಮಷ್ಟು ಅನುಭವ ನನಗಿಲ್ಲ : ಡಿಕೆಶಿಗೆ ಹೆಚ್ಡಿಕೆ ತಿರುಗೇಟು

ಭೂ ಕಬ್ಜ-ಒತ್ತುವರಿ ಮಾಡುವುದರಲ್ಲಿ ನಿಮ್ಮಷ್ಟು ಅನುಭವ ನನಗಿಲ್ಲ : ಡಿಕೆಶಿಗೆ ಹೆಚ್ಡಿಕೆ ತಿರುಗೇಟು

I do not have as much experience as you in land grabbing and encroachment: HDK hits back at DK

ಬೆಂಗಳೂರು,ಜ.9- ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿರುವ ಅವಕಾಶದಲ್ಲಿ ಜನತೆಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವಂತಹ ಭಾರೀ ಅನುಭವ ನನಗಿಲ್ಲ. ವಿನಮ್ರವಾಗಿ ಒಪ್ಪಿಕೊಳ್ಳುವೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ನಿಮಗೆ ಭೂ ಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು ಎಂದು ಟೀಕಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ, ನಮ ಪಕ್ಷದ ವಿಲೀನದ ಚಿಂತೆ ಪಕ್ಕಕ್ಕಿಡಿ. ನನ್ನ ಮತ್ತು ನಿಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪಾವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ ಎಂದಿದ್ದೀರಿ. ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಉಪಮುಖ್ಯಮಂತ್ರಿ. ನಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್‌, ಫಿಕ್ಸಿಂಗ್‌, ಒದ್ದು ಕಿತ್ತುಕೊಳ್ಳುವುದು ನನ್ನ ಅನುಭವಲ್ಲಾ ಡಿಕೆಶಿ ಅವರೇ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ.ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್‌್ಸ ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ ಎಕ್ಸ್ ಪೀರಿಯನ್ಸ್ ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್‌ ಡಿಕೆಶಿ ಅವರೇ? ಎಂದು ಪ್ರಶ್ನಿಸಿದ್ದಾರೆ.

ಬಳ್ಳಾರಿಯಲ್ಲಿ ಪೊಲೀಸ್‌‍ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಅಂಥ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ? ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಹೋಗಲಿ, ನೀವು ಮೀಟಿಂಗ್‌ ಮಾಡಿ ಎಂದು ಗೃಹ ಸಚಿವರು, ಸಿಎಂ ಅವರು ಹೇಳಿದ್ದರೇ? ಇಲ್ಲವಲ್ಲ. ಅದಕ್ಕೇ ನಾನು ಹೇಳಿದ್ದು, ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ? ಅಥವಾ ರಬ್ಬರ್‌ ಸ್ಟ್ಯಾಂಪ್‌ ಗೃಹ ಮಂತ್ರಿಗಳಾ? ಎಂದು. ಒಬ್ಬ ಹಿರಿಯ ಮಂತ್ರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿ ಏನನ್ನಾದರೂ ಮಾಡಿಸಿದ್ದೀರಾ? ಎಂದು ಪ್ರಶ್ನೆ ಮಾಡಿದ್ದಾರೆ.

ನಿಮದು ಭಾರೀ ಅನುಭವ, ಸಿಕ್ಕಾಪಟ್ಟೆ ಸೀನಿಯಾರಿಟಿ. ಇಂಥ ಸಣ್ಣ ವಿಷಯ ನಿಮಗೇಕೆ ತಿಳಿಯಲಿಲ್ಲ ಮಿಸ್ಟರ್‌ ಡಿಕೆಶಿ ಅವರೇ? ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

RELATED ARTICLES

Latest News