ಬೆಂಗಳೂರು, ಆ.16- ಮುಂಬರುವ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಬಿಬಿಎಂಪಿ ಚುನಾವಣೆ ಸಿದ್ಧತೆಯನ್ನು ಜೆಡಿಎಸ್ ಪ್ರಾರಂಭಿಸಿದೆ. ಲೋಕಸಭಾ ಚುನಾವಣೆಯ ನಂತರ ಹುಮಸ್ಸಿನಲ್ಲಿರುವ ಜೆಡಿಎಸ್ ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಲು ಈಗಿನಿಂದಲೇ ಕಾರ್ಯತಂತ್ರ ರೂಪಿಸಲಿದೆ.
ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ತಯಾರಿ ನಡೆಸುವುದು, ಪಕ್ಷದ ಸದಸ್ಯತ್ವ ಅಭಿಯಾನ ಹಮಿಕೊಳ್ಳುವುದು ಹಾಗೂ ಪಕ್ಷದ ಸಂಘಟನೆ ಬಗ್ಗೆ ಚರ್ಚಿಸಲು ಆ.18ರಂದು ಜೆಪಿ ಭವನದಲ್ಲಿ ಜೆಡಿಎಸ್ ಸಭೆಯನ್ನು ಕರೆಯಲಾಗಿದೆ.
ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿರವರ ಅಧ್ಯಕ್ಷತೆಯಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ. ಈ ಸಭೆಗೆ ಜೆಡಿಎಸ್ ಪಕ್ಷದ ಸಂಸದರು, ಮಾಜಿ ಸಂಸದರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಕಾರ್ಯಾಧ್ಯಕ್ಷರು, ಮಹಾಪ್ರಧಾನ ಕಾರ್ಯದರ್ಶಿಗಳು, ತಾಲ್ಲೂಕು ಅಧ್ಯಕ್ಷರು, ರಾಜ್ಯ ಕೋರ್ ಕಮಿಟಿ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ರಾಜ್ಯ ಪದಾಧಿಕಾರಿಗಳು, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗಳು, ವಿವಿಧ ವಿಭಾಗಗಳ ರಾಜ್ಯಾಧ್ಯಕ್ಷರುಗಳು ತಪ್ಪದೆ ಹಾಜರಾಗುವಂತೆ , ಜೆಡಿಎಸ್ ರಾಜ್ಯ ಮಹಾ ಪ್ರಧಾನಕಾರ್ಯದರ್ಶಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಅವರು ಕೋರಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್, ಮುಂಬರುವ ವಿಧಾನಸಭಾ ಉಪ ಚುನಾವಣೆ, ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಅಪೇಕ್ಷೆ ಹೊಂದಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.
ಇತ್ತೀಚೆಗೆ ಬೆಂಗಳೂರಿನಿಂದ ಮೈಸೂರಿಗೆ ನಡೆದ ರಾಜ್ಯ ಸರ್ಕಾರದ ವಿರುದ್ಧದ ಪಾದಯಾತ್ರೆಯನ್ನು ಬಿಜೆಪಿ ಜತೆಗೂಡಿ ನಡೆಸಲಾಗಿತ್ತು. ಅಧಿವೇಶನದಲ್ಲೂ ಜಂಟಿ ಹೋರಾಟ ನಡೆಸಿದ್ದವು. ಮೈತ್ರಿಯಾದ ನಂತರ ಆಗಾಗ್ಗೆ ಕೆಲವೊಂದು ಭಿನ್ನಾಭಿಪ್ರಾಯಗಳು ಎರಡೂ ಪಕ್ಷಗಳ ನಡುವೆ ವ್ಯಕ್ತವಾಗಿ ಕಾರ್ಯಕರ್ತರ ನಡುವೆ ಅಸಮಾಧಾನವಾಗುತ್ತಿರುವುದು ಉಂಟು.
ಆದರೆ, ಉಭಯ ಪಕ್ಷಗಳ ನಾಯಕರ ನಡುವೆ ಮೈತ್ರಿ ವಿಚಾರದಲ್ಲಿ ಒಮತವಿದ್ದು, ಮುಂಬರುವ ವಿವಿಧ ಚುನಾವಣೆಗಳಲ್ಲೂ ಇದೇ ರೀತಿ ಮೈತ್ರಿ ಮುಂದುವರೆಯಲಿದೆ ಎಂದೂ ಎರಡೂ ಪಕ್ಷಗಳ ನಾಯಕರು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಅದೇ ರೀತಿ ಚುನಾವಣೆ ಪೂರ್ವ ಮೈತ್ರಿ ಸ್ಥಳೀಯ ಸಂಸ್ಥೆಗಳಲ್ಲೂ ಮುಂದುವರೆಸುವ ಸಾಧಕ-ಬಾಧಕಗಳ ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.