ಬೆಂಗಳೂರು,ಸೆ.9- ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ರಿಟ್ ಅರ್ಜಿಯ ವಿಚಾರಣೆಯು ಹೈಕೋರ್ಟ್ನಲ್ಲಿ ನಡೆಯಲಿದೆ.
ಹೈಕೋರ್ಟ್ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ಅರ್ಜಿಯ ವಿಚಾರಣೆ ನಡೆಯಲಿದ್ದು, ರಾಜ್ಯಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಾಡುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ಅವರ ಪರವಾಗಿ ವಕೀಲರಾದ ಶತಾಭೀಷ್ ಶಿವಣ್ಣ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ರಾಜ್ಯಪಾಲರು ಅಭಿಯೋಜನೆಗೆ ನೀಡಿರುವ ಪೂರ್ವಾನುಮತಿಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ ಕುರಿತಂತೆ ಈವರೆಗೂ ನಾಲ್ಕು ವಿಚಾರಣೆಗಳು ನಡೆದಿವೆ.
ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಮತ್ತು ರವಿವರ್ಮಕುಮಾರ್ ಅವರು ವಾದ ಮಂಡಿಸಲಿದ್ದಾರೆ.ರಾಜ್ಯಪಾಲರ ಪರವಾಗಿ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ಮೆಹ್ತಾ ಅವರು ವಾದ ಮಂಡಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ.ಅಬ್ರಹಾಂ, ಸ್ನೇಹಮಯಿ ಕೃಷ್ಣ, ಜೆಡಿಎಸ್ನ ಪ್ರದೀಪ್ಕುಮಾರ್ ಎಸ್.ಬಿ. ಅವರು ಅಭಿಯೋಜನೆಗೆ ಪೂರ್ವಾನುಮತಿ ಕೇಳಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.
ಆ.16 ರಂದು ಆದೇಶ ಹೊರಡಿಸಿ ಪೂರ್ವಾನುಮತಿ ನೀಡಿದ್ದರು. ಇದು ನಿಯಮಬಾಹಿರವಾಗಿದ್ದು, ರಾಜ್ಯಪಾಲರು ಕೇಂದ್ರಸರ್ಕಾರದ ಪ್ರಮಾಣಿತ ಮಾರ್ಗಸೂಚಿಗಳನ್ನು ಪಾಲನೆ ಮಾಡಿಲ್ಲ ಹಾಗೂ ಸ್ವವಿವೇಚನೆ ಬದಲಾಗಿ ಬಾಹ್ಯ ಪ್ರಭಾವಕ್ಕೆ ಒಳಗಾಗಿ ಪೂರ್ವಾನುಮತಿ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಪರವಾಗಿ ಅವರು ವಾದಿಸಿದ್ದರು.
ಇದು ರಾಜಕೀಯವಾಗಿ ತೀವ್ರ ಕುತೂಹಲ ಕೆರಳಿಸಿದ್ದು, ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಅವರ ಭವಿಷ್ಯ ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ನ್ಯಾಯಾಲಯ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದರೆ ಹಾಗೂ ಸಿದ್ದರಾಮಯ್ಯ ಅವರಿಗೆ ತೊಂದರೆಯಾಗಲಿದ್ದು, ಈಗಾಗಲೇ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗೆ ಸಾಕಷ್ಟು ಇಂಬು ನೀಡಲಿದೆ.