ಬೆಂಗಳೂರು,ಜ.13- ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಮೂಗಲಿ ಗ್ರಾಮದಲ್ಲಿಂದು ಕಾಡಾನೆ ದಾಳಿಗೆ 40 ವರ್ಷದ ಮಹಿಳೆ ಮೃತಪಟ್ಟಿದ್ದು, ಕೂಡಲೇ ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಭಾಯಿಸುವಂತೆ ಹಾಸನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪಾರಣ್ಯ ಸಂರಕ್ಷಣಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಆನೆ ದಾಳಿಗೆ ಮಹಿಳೆ ಮೃತಪಟ್ಟಿರುವುದಕ್ಕೆ ಸಂತಾಪ ವ್ಯಕ್ತಪಡಿಸಿರುವ ಅವರು, ಮಹಿಳೆ ಸಾವಿಗೆ ಕಾರಣವಾದ ಆನೆಯನ್ನು ಕಾಡಿಗೆ ಮರಳಿಸಲು ಅಥವಾ ಆನೆ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪ್ರತಿಯೊಂದು ಜೀವವೂ ಅಮೂಲ್ಯ, ಹೋದ ಜೀವವನ್ನು ಮರಳಿ ತರಲು ಸಾಧ್ಯವಿಲ್ಲ. ಆದರೆ ಆಕಸಿಕವಾಗಿ ವನ್ಯಜೀವಿ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ಆಸರೆಯಾಗಲು ನಿಯಮಾನುಸಾರ ಪರಿಹಾರ ನೀಡುವಂತೆಯೂ ಅವರು ತಿಳಿಸಿದ್ದಾರೆ.
ವನ್ಯಜೀವಿಗಳಿಂದ ಮಾನವ ಜೀವ ಹಾನಿ ಸಂಭವಿಸದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಆನೆಗಳ ಸಂಚಾರದ ಬಗ್ಗೆ ಸ್ಥಳೀಯರಿಗೆ ಎಚ್ಚರಿಕೆ ಸಂದೇಶ ರವಾನಿಸಲು ಮತ್ತು ಆನೆ ಕಾರ್ಯಪಡೆ ಸಿಬ್ಬಂದಿಯನ್ನು ನಿಯೋಜಿಸಲೂ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
