ಬೆಂಗಳೂರು, ಸೆ.26- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುದಿಲ್ಲವೆಂದು ಸ್ಪಷ್ಟಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿರುವ ಕಳಂಕಿತ ಸಚಿವರು ಮೊದಲು ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷನಾಗಿ ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ದೆಹಲಿಯಿಂದ ಇಲ್ಲಿಯ ವರೆಗೂ ಪ್ರತಿಯೊಬ್ಬ ಕಾಂಗ್ರೆಸ್ಸಿಗರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಇದ್ದಾರೆ. ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿ ಸುವುದಿಲ್ಲ ಎಂದರು.
ಜೆಡಿಎಸ್ ಮತ್ತು ಬಿಜೆಪಿ ನಾಯಕರು ರಾಜಕೀಯವಾಗಿ ನಡೆಸುತ್ತಿರುವ ಷಢ್ಯಂತ್ರ ಎಲ್ಲರಿಗೂ ಗೊತ್ತಿದೆ. ಈ ಹಂತದಲ್ಲಿ ರಾಜೀನಾಮೆ ಎಂಬುದೇ ಅಪ್ರಸ್ತುತ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚಖಾತ್ರಿ ಯೋಜನೆಗಳಿಂದ ಜನರಿಗೆ ಆಗುತ್ತಿರುವ ಅನೂಕೂಲಗಳನ್ನು ಸಹಿಸಿಕೊಳ್ಳಲು ವಿರೋಧ ಪಕ್ಷದವರಿಗೆ ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿರುವ ಹಲವು ಮಂದಿ ಸಚಿವರುಗಳ ಮೇಲೆ ಎಫ್‌ಐಆರ್‌ಗಳು ದಾಖಲಾಗಿವೆ. ವಿಚಾರಣೆಗಳು ನಡೆಯುತ್ತಿವೆ. ಅಂತಹವರಿಂದ ಮೊದಲು ರಾಜೀನಾಮೆ ಪಡೆಯಲಿ ಎಂದು ಡಿಕೆ ಶಿವಕುಮಾರ್ ಸವಾಲು ಹಾಕಿದರು.