ಬೆಂಗಳೂರು,ಸೆ.27- ಸಿಬಿಐ ಮುಕ್ತ ತನಿಖೆಗೆ ಅವಕಾಶ ನಿರಾಕರಿಸುವ ಬದಲಾವಣೆಗಳ ಕುರಿತು ಕಾಂಗ್ರೆಸ್ ನಾಯಕರು ಸಮರ್ಥನೆ ನೀಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಕ್ಷಣೆಗಾಗಿ ಈ ರೀತಿಯ ನಿರ್ಣಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಈ ಹಿಂದೆ ಕೇಂದ್ರದ ಅಧಿಕಾರಿಗಳ ವಿರುದ್ಧ ನೇರವಾಗಿ ತನಿಖೆ ನಡೆಸಲಾಗುತ್ತಿದೆ. ಅದಕ್ಕೆ ನಮ್ಮ ಅನುಮತಿ ಬೇಕಿರಲಿಲ್ಲ. ಇನ್ನು ಮುಂದೆ ಕೇಂದ್ರದ ಅಧಿಕಾರಿಗಳ ತನಿಖೆಗೂ ರಾಜ್ಯಸರ್ಕಾರದ ಅನುಮತಿಯ ಅಗತ್ಯವಿದೆ ಎಂಬ ಬದಲಾವಣೆ ಮಾಡಿದ್ದೇವೆ. ಸಿದ್ದರಾಮಯ್ಯನವರಿಗಾಗಿ ಈ ನಿರ್ಣಯ ತೆಗೆದುಕೊಂಡಿಲ್ಲ. ಸಿದ್ದರಾಮಯ್ಯ ಕೇಂದ್ರ ಸರ್ಕಾರದ ನೌಕರರು ಅಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯಸರ್ಕಾರದ ನಿರ್ಣಯ ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ಸಂಬಂಧಪಟ್ಟಿದ್ದಾಗಿದೆ. ಇದನ್ನು ರಾಜಕೀಯವಾಗಿ ವಿಶ್ಲೇಷಣೆ ಮಾಡುವುದು ಸರಿಯಲ್ಲ ಎಂದು ಹೇಳಿದರು.ಪ್ರಧಾನಮಂತ್ರಿ ನರೇಂದ್ರಮೋದಿ ಹರಿಯಾಣದಲ್ಲಿ ಕರ್ನಾಟಕದ ಪ್ರಕರಣವನ್ನು ಉಲ್ಲೇಖ ಮಾಡಿದ್ದಾರೆ. ಮಾನ್ಯ ಪ್ರಧಾನಿಯವರು ಎಲೆಕ್ಟ್ರೋಲ್ ಬಾಂಡ್ಗಳ ಬಗ್ಗೆ ಸುಪ್ರೀಂಕೋರ್ಟ್ ಈ ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಪುನರುಚ್ಚರಿಸಬೇಕು.
ಮೋದಿಯವರು ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕು ಎಂದು ಪ್ರತಿಸವಾಲು ಹಾಕಿದರು.ಕೇಂದ್ರಸಚಿವ ಎಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಪ್ರಾಥಮಿಕ ತನಿಖೆಯಾಗಿದೆ. ಅವರೂ ಕೂಡ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಒತ್ತಾಯಿಸಿದರು.
ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ. ಅವರ ವಿರುದ್ಧ ಈವರೆಗೂ ಪ್ರಾಥಮಿಕ ತನಿಖೆ ಕೂಡ ಆಗಿಲ್ಲ ಎಂಬುದನ್ನು ಮರೆಯುವಂತಿಲ್ಲ ಎಂದು ಹೇಳಿದರು.ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ರವರು ಅಧಿಕಾರಿಗಳಿಗೆ ನೇರವಾಗಿ ಪತ್ರ ಬರೆಯುವುದಿಲ್ಲ. ಮುಖ್ಯಮಂತ್ರಿಯವರಿಗೆ ಬರೆಯಬೇಕು. ಎಲ್ಲದಕ್ಕೂ ಒಂದು ನಿಯಮವಿದೆ.
ರಾಜ್ಯಪಾಲರು ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ನಿಯಮಗಳನ್ನು ಮೀರುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ ಅವರಿಗೆ ವಯಸ್ಸಾಗಿದೆ. ಹೀಗಾಗಿ ಅವರ ಹೇಳಿಕೆಗೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ ಎಂದು ಹೇಳಿದರು.