Wednesday, January 14, 2026
Homeರಾಜ್ಯಕೆಎಸ್‌‍ಆರ್‌ಟಿಸಿ ಬಸ್‌‍ - ಕಾರ್ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ ಮೂವರ ಸಾವು

ಕೆಎಸ್‌‍ಆರ್‌ಟಿಸಿ ಬಸ್‌‍ – ಕಾರ್ ನಡುವೆ ಭೀಕರ ಅಪಘಾತ : ಒಂದೇ ಕುಟುಂಬದ ಮೂವರ ಸಾವು

KSRTC bus-car collision: Three members of the same family die

ಶಿವಮೊಗ್ಗ, ಜ.14 – ಕೆಎಸ್‌‍ಆರ್‌ಟಿಸಿ ಬಸ್‌‍ ಮತ್ತು ಸ್ವಿಫ್ಟ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್‌‍ ಬಳಿ ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಮೂಲದ ನಿವಾಸಿಗಳಾದ ರಿಯಾಜ್‌ ಅಹಮದ್‌ , ರಾಹಿಲ್‌ ಮತ್ತು ಫಾತಿಮಾ ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಶೃಂಗೇರಿ ಮೂಲದ ಒಂದೇ ಕುಟುಂಬದ 6 ಮಂದಿ ಪ್ರಯಾಣ ಮಾಡುತ್ತಿದ್ದರು. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿ, ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ಸಾಗುತ್ತಿದ್ದರು.

ತೀರ್ಥಹಳ್ಳಿ ತಾಲ್ಲೂಕಿನ ಭಾರತೀಪುರ ಕ್ರಾಸ್‌‍ ಬಳಿ ಮಂಗಳೂರಿನಿಂದ ರಾಯಚೂರು ಕಡೆಗೆ ಅತೀ ವೇಗವಾಗಿ ಹೋಗುತ್ತಿದ್ದ ಕೆಎಸ್‌‍ಆರ್‌ಟಿಸಿ ಬಸ್‌‍ ಈ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.ಅಪಘಾತದ ಸುದ್ದಿ ತಿಳಿದ ತಕ್ಷಣ ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಕಾರಿನೊಳಗೆ ಸಿಕ್ಕಿಕೊಂಡಿದ್ದ ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೂವರ ಮೃತದೇಹಗಳನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಮಾರ್ಗದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

RELATED ARTICLES

Latest News