ಚಾಮರಾಜನಗರ,ಜ.14-ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.
ಹನ್ನೂರು ತಾಲ್ಲೂಕಿನ ಪೊನ್ನಾಚಿ ರಾಮೇಗೌಡನಹಳ್ಳಿಯ ಶಿವಪ್ಪ (21) ಮತ್ತು ಸತೀಶ್ (24) ಮೃತಪಟ್ಟ ಬೈಕ್ ಸವಾರರು.ಇವರಿಬ್ಬರು ಬೈಕ್‌ನಲ್ಲಿ ಮಹದೇಶ್ವರ ಬೆಟ್ಟದ ಮುಖ್ಯರಸ್ತೆಯಲ್ಲಿ ತೆರಳುತ್ತಿದ್ದಾಗ ಮೂಕಳ್ಳಿ ಮಾರಮ ದೇವಾಲಯದ ಬಳಿ ಎದುರಿನಿಂದ ಅತೀ ವೇಗವಾಗಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಸುದ್ದಿ ತಿಳಿದು ರಾಮಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಇಬ್ಬರು ಯುವಕರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.ಅಪಘಾತ ಸಂಭವಿಸುತ್ತಿದ್ದಂತೆ ಬಸ್ ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.
