ಬೆಂಗಳೂರು, ಅ.3-ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಚದುರಿದಂತೆ ಮಳೆಯಾಗುತ್ತಿದೆ. ಇದೇ ರೀತಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆಗಳಿವೆ.
ಬಂಗಾಳಕೊಲ್ಲಿಯಲ್ಲಿ ಮೇಲೈ ಸುಳಿಗಾಳಿ ಉಂಟಾಗಿದ್ದು, ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿದೆ. ಅಲ್ಲದೆ, ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿರುವುದರಿಂದ ಗುಡುಗು, ಮಿಂಚು, ಬಲವಾದ ಗಾಳಿ ಸಹಿತ ಮಳೆಯಾಗುತ್ತಿದೆ. ಪೂರ್ವ ಮುಂಗಾರಿನ ರೀತಿಯಲ್ಲಿ ರಭಸವಾದ ಮಳೆ ಕೆಲವೆಡೆ ಬಿದ್ದಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಗಳಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.ಕರಾವಳಿ, ಮಲೆನಾಡು ಭಾಗದಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ಒಳನಾಡಿನಲ್ಲೂ ಮಳೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ.
ಅಂದರೆ, ಅಕ್ಟೋಬರ್ 6ರವರೆಗೂ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ.ಅಕ್ಟೋಬರ್ ಆರಂಭದಲ್ಲಿ ಮಳೆ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಆದರೆ, ಸೆಪ್ಟೆಂಬರ್ ಮಳೆ ಕೊರತೆ ಉಂಟಾಗಿ ಬೆಳೆಗಳಿಗೆ ತೊಂದರೆಯಾಗಿತ್ತು. ಈ ಮಳೆ ಎರಡು ವಾರ ಮುಂಚೆ ಬಿದ್ದಿದ್ದರೆ ಹೆಚ್ಚು ಬೆಳೆಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು ಎಂಬುದು ತಜ್ಞರ ಅಭಿಪ್ರಾಯವಾಗಿದೆ.
ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ.