ಬೆಂಗಳೂರು,ಅ.6- ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ದಿನಾಂಕವನ್ನು ಭಾರತ ಚುನಾವಣಾ ಆಯೋಗ (ಇಸಿಐ) ಇನ್ನೂ ಪ್ರಕಟಿಸದಿದ್ದರೂ, ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ.
ಕೇಂದ್ರ ಸಚಿವ ಮತ್ತು ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ನವದೆಹಲಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಡಾ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡಸಿದ್ದಾರೆ.
ಈ ನಡುವೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಕ್ರವಾರ ಚನ್ನಪಟ್ಟಣ ಕ್ಷೇತ್ರಕ್ಕೆ 300 ಕೋಟಿ ರೂ. ವೆಚ್ಚದ ಯೋಜನೆಗಳನ್ನು ಘೋಷಣೆ ಮಾಡಿ, ರಾಜಕೀಯ ಚಟುವಟಿಕೆ ಆರಂಭಿಸಿದ್ದಾರೆ.
ಚನ್ನಪಟ್ಟಣದಲ್ಲಿ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ್ದ ಡಿಕೆ.ಶಿವಕುಮಾರ್ ಅವರು. ಇನ್ನೊಂದು ವಾರದಲ್ಲಿ ಉಪಚುನಾವಣೆಯ ದಿನಾಂಕ ಪ್ರಕಟಗೊಳ್ಳುವ ಸಾಧ್ಯತೆಗಳಿವೆ. ಪ್ರಸ್ತುತ ನಾನು ಅಭ್ಯರ್ಥಿ ಬಗ್ಗೆ ಯೋಚಿಸುತ್ತಿಲ್ಲ. ನಮ ಮತದಾರರು ನಾನೇ ಅಭ್ಯರ್ಥಿ ಎಂದು ಭಾವಿಸಿ ಮತ ಚಲಾಯಿಸುವಂತೆ ವಿನಂತಿಸುತ್ತಿದ್ದೇನೆ. ಅಭ್ಯರ್ಥಿಯ ಬದಲು ನನ್ನ ಮುಖ ನೋಡಿ ಮತ ಹಾಕುವಂತೆ ಮತದಾರರಲ್ಲಿ ವಿನಂತಿಸುತ್ತೇನೆಂದು ಮನವಿ ಮಾಡಿದ್ದರು.
ರಾಜ್ಯ ಸರ್ಕಾರ ಅರ್ಹ ಫಲಾನುಭವಿಗಳಿಗೆ 5,000 ಮನೆಗಳನ್ನು ವಿತರಿಸಿದ್ದು, ಪ್ರತಿ ಗ್ರಾಮ ಪಂಚಾಯಿತಿ 100-150 ಮನೆಗಳನ್ನು ಪಡೆಯುತ್ತಿದೆ. ಚನ್ನಪಟ್ಟಣ ತಾಲೂಕಿನ ಪ್ರತಿ ಪಂಚಾಯಿತಿಯಲ್ಲಿ 2-5 ಕೋಟಿ ರೂ.ಗಳ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದರು.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಕುಮಾರಸ್ವಾಮಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿರುವ ಚನ್ನಪಟ್ಟಣ ಹಿಂದಿನಿಂದಲೂ ಜೆಡಿಎಸ್ ಭದ್ರಕೋಟೆಯಾಗಿದೆ. ಜೆಡಿಎಸ್‌ನ ಈ ಭದ್ರಕೋಟೆಯಲ್ಲಿ ಕುಮಾರಸ್ವಾಮಿ ಹಾಗೂ ಶಿವಕುಮಾರ್ ನಡುವೆ ಪೈಪೋಟಿ ಶುರುವಾಗಿದೆ.
ಬಲ್ಲ ಮೂಲಗಳ ಪ್ರಕಾರ, ಕುಮಾರಸ್ವಾಮಿ ಅವರು ತಮ ಪುತ್ರ ಹಾಗೂ ಜೆಡಿಎಸ್ ಯುವ ಘಟಕದ ಮುಖ್ಯಸ್ಥ ನಿಖಿಲ್ ಅವರನ್ನು ಕಣಕ್ಕಿಳಿಸುವ ಕುರಿತು ಚಿಂತನೆ ನಡೆಸುತ್ತಿದ್ದು, ಈ ವಿಚಾರವಾಗಿಯೇ ಅಗರ್ವಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಬಿಜೆಪಿ ಜೊತೆಗಿನ ಒಪ್ಪಂದದ ಪ್ರಕಾರ ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕುಮಾರಸ್ವಾಮಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಬೇಕಿದೆ ಎಂದು ಮೂಲವೊಂದು ತಿಳಿಸಿವೆ.
ನಿಖಿಲ್ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಮೂಲಗಳು ಹೇಳಿದ್ದರೂ, ಅದನ್ನು ತಳ್ಳಿಹಾಕುವಂತಿಲ್ಲ ಎಂದು ಪಕ್ಷದ ಕೆಲ ನಾಯಕರು ಹೇಳಿದ್ದಾರೆ.
ಇನ್ನು ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಶಿವಕುಮಾರ್ ಅವರ ಕಿರಿಯ ಸಹೋದರ ಹಾಗೂ ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿಕೆ ಸುರೇಶ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಇನ್ನು ಬಿಜೆಪಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದು, ಕುಮಾರಸ್ವಾಮಿ ಅವರು ಇದಕ್ಕೆ ಒಪ್ಪಿಕೊಳ್ಳಲು ಸಿದ್ಧರಿಲ್ಲ ಎನ್ನಲಾಗುತ್ತಿದೆ.
ಈ ಹಿಂದೆ ಎಚ್‌ಡಿ ಕುಮಾರಸ್ವಾಮಿ ಮತ್ತು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಉರುಳಿಸಲು ಕಾರಣರಾದವರಿಗೆ ಟಿಕೆಟ್ ನೀಡಿ ನೀಡಿ, ಹೇಗೆ ಕಣಕ್ಕಿಳಿಸಲು ಸಾಧ್ಯ ಎಂದು ಜೆಡಿಎಸ್ ಮುಖಂಡರೊಬ್ಬರು ಪ್ರಶ್ನಿಸಿದ್ದಾರೆ.
ಈ ನಡುವೆ ಪಕ್ಷದಿಂದ ಟಿಕೆಟ್ ಕೊಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಗಳು ಕಡಿಮೆಯಿದೆ ಎನ್ನಲಾಗುತ್ತಿದ್ದು, ಕೊನೆ ಗಳಿಗೆಯಲ್ಲಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಸೇರ್ಪಡೆಗೊಳಿಸುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.