ಬೆಂಗಳೂರು,ಅ.6- ಕಳೆದ ನಾಲ್ಕೈದು ದಿನಗಳಿಂದ ಬೀಳುತ್ತಿರುವ ಮಳೆ ಇನ್ನೂ ನಾಲ್ಕು ದಿನ ಮುಂದುವರೆಯಲಿದೆ.ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ನಿನ್ನೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಧಾರಾಕಾರ ಮಳೆಯಾಗಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವನ್ನು ಸೃಷ್ಟಿ ಮಾಡಿತ್ತು.
ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ರಾತ್ರಿ ರಸ್ತೆಗಳು ಕಾಲುವೆಗಳಂತೆ ಕಂಡುಬಂದವು. ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಉಂಟಾಗಿತ್ತು.
ರಾಜಕಾಲುವೆ, ಮ್ಯಾನ್‌ಹೋಲ್‌ಗಳು ಕೆಲವೆಡೆ ಉಕ್ಕಿ ಹರದಿವೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ರಾಜ್ಯದ ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದ್ದು, ಕೆಲವೆಡೆ ಭಾರೀ ಮಳೆಯಾಗಿದೆ.
ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅ.8ರವರೆಗೆ ಗುಡುಗು, ಮಿಂಚು ಹಾಗೂ ಜೋರಾದ ಗಾಳಿಯೊಂದಿಗೆ ವ್ಯಾಪಕ ಮಳೆಯಾಗಲಿದ್ದು ಕೆಲವೆಡೆ ಚದುರಿದಂತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲೂ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ, ಬೆಂಗಳೂರು ಹಾಗೂ ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿವೆ.