ಬೆಂಗಳೂರು, ಅ.11- ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ.
ಉತ್ತರ ಕರ್ನಾಟಕ ಹೊರತುಪಡಿಸಿ ಉಳಿದೆಲ್ಲಾ ಭಾಗಗಳಲ್ಲಿ ವಾಡಿಕೆ ಪ್ರಮಾಣದ ಮಳೆ ಕಳೆದ ಹತ್ತು ದಿನಗಳಲ್ಲಿ ಬಿದ್ದಿದೆ. ಉತ್ತರ ಒಳನಾಡಿನಲ್ಲಿ ಮಾತ್ರ ವಾಡಿಕೆಗಿಂತ ಶೇ.14 ರಷ್ಟು ಕಡಿಮೆ ಮಳೆಯಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ ಶೇ.15, ಮಲೆನಾಡು ಶೇ.28 ಹಾಗೂ ಕರಾವಳಿ ಭಾಗದಲ್ಲಿ ಶೇ.16 ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಲಕ್ಷದ್ವೀಪದ ಬಳಿ ವಾಯುಭಾರ ಕುಸಿತ ಉಂಟಾಗಿದೆ. ಅಲ್ಲದೆ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಹೀಗಾಗಿ ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಮುನ್ಸೂಚನೆಗಳಿವೆ. ಒಂದೆರಡು ಕಡೆ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಇಲ್ಲವೇ ರಾತ್ರಿ ವೇಳೆ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಒಂದೆರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.