Friday, October 18, 2024
Homeರಾಷ್ಟ್ರೀಯ | Nationalಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಮಳೆ

Low Pressure area that has formed over Bay of Bengal

ಬೆಂಗಳೂರು,ಅ.14- ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಒಳನಾಡಿನಲ್ಲಿ ನಿನ್ನೆಯಿಂದ ಜಿಟಿಜಿಟಿ ಮಳೆ ಆರಂಭವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ನಿನ್ನೆಯಿಂದ ಆರಂಭವಾಗಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಟ್ಟು ಬಿಡದೆ ಬೀಳುತ್ತಿರುವ ತುಂತುರು ಮಳೆಯಿಂದಾಗಿ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗಿದೆ.

ಕೊಡೆ, ಜರ್ಕಿನ್‌ಗಳ, ಸ್ಪೆಟರ್‌ಗಳ ಆಶ್ರಯ ಪಡೆದು ದೈನಂದಿನ ಕೆಲಸಕ್ಕೆ ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮೋಡ ಮುಸುಕಿದ್ದು, ಮಳೆ ಜಿನಿಗುತ್ತಿರುವುದರಿಂದ ವಾತಾವರಣ ತಂಪಾಗಿದ್ದು, ಚಳಿಯ ಅನುಭವ ಉಂಟಾಗುತ್ತಿದೆ.

ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದರು. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಬಂಗಾಳದ ಉಪಸಾಗರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ಪಾಂಡಿಚೇರಿ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದ ಕರಾವಳಿ ಹಾಗೂದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ.

ನಿನ್ನೆಯಿಂದ ರಾಜ್ಯದಲ್ಲಿ ಸಾದಾರಣ ಪ್ರಮಾಣದ ಮಳೆಯಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದ ಮಲೆಯಾಗುವ ಮುನ್ಸೂಚನೆಗಳಿವೆ ಎಂದರು. ಮಳೆ ಹೆಚ್ಚಾಗುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ನಾಳೆಯಿಂದ ಮಳೆ ಹೆಚ್ಚಲಿದ್ದು, ಅ.17 ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.

ಬಲವಾದ ಮೇಲ್ಮೈ ಗಾಳಿ ಕೆಲವೆಡೆ ಬೀಸಲಿದ್ದು, ಗುಡುಗು ಮಿಂಚಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಆಗಾಗ್ಗೆ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

RELATED ARTICLES

Latest News