ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಹಾಗೂ ಎನ್‍ಡಿಎ ಮೈತ್ರಿಕೂಟ ನಡುವಿನ ಜಿದ್ದಾಜಿದ್ದಿಗೆ ಸಾಕ್ಷಿಯಾಗಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನವಂಬರ್ 13 ರಂದು ಮತದಾನ ನಡೆದು, ನ. 23 ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಮತ್ತು ಬಳ್ಳಾರಿಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ದಿನಾಂಕವನ್ನು ಮಂಗಳವಾರ ಪ್ರಕಟಿಸಿದರು. ನ, 13 ರಂದು ಮೂರು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದು ನ. 23 ರಂದು ಮತ ಎಣಿಕೆ ನಡೆಯಲಿದೆ.
*ಮತದಾನದ ದಿನಾಂಕ – 13 -11-2024
*ಮತ ಎಣಿಕೆ 23-11-2024
*ನಾಮಪತ್ರ ಸಲ್ಲಿಕೆ ಪ್ರಾರಂಭ- 15 -10-2024
*ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ 25-10-2024
*ನಾಮಪತ್ರ ಪರಿಶೀಲನೆ – 28-10-2024
*ನಾಮಪತ್ರ ಹಿಂಪಡೆಯಲು ಕೊನೆ ದಿನ 30-10-2024
ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕಡೆಯ ದಿನವಾಗಿದೆ. ಅಕ್ಟೋಬರ್ 20ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿ 22 ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸಂಸದರಾದ ಬಸವರಾಜ ಬೊಮ್ಮಾಯಿ ಮತ್ತು ಇ.ವಿ.ತುಕಾರಾಂ ಅವರುಗಳು ಲೋಕಸಭೆಗೆ ಆಯ್ಕೆಯಾದ ಹಿನ್ನಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ತೆರವಾದ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ನೀತಿ ಸಂಹಿತೆ ಮಂಗಳವಾರದಿಂದಲೇ ಜಾರಿಯಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಎನ್‍ಡಿಎ ನಡುವೆ ಭಾರೀ ಜಿದ್ದಾಜಿದ್ದಿ ಏರ್ಪಡುವ ಸಂಭವವಿದೆ. ಲೋಕಸಭೆ ಚುನಾವಣೆ ನಂತರ ನಡೆಯುತ್ತಿರುವ ಉಪಸಮರ ಇದಾಗಿರುವುದರಿಂದ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲುವ ಉಮೇದಿನಲ್ಲಿದೆ. ಹೀಗಾಗಿಯೇ ಈಗಾಗಲೇ ಚನ್ನಪಟ್ಟಣ ಮತ್ತು ಸಂಡೂರಿಗೆ ಭರಾಪೂರ ಕೊಡುಗೆಗಳನ್ನು ನೀಡಿದೆ.
ಕೆಲ ದಿನಗಳ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿ ಉದ್ಯೋಗ ಮೇಳ ನಡೆಸುವುದರ ಜೊತೆಗೆ ಹಕ್ಕು ಪತ್ರಗಳನ್ನು ವಿತರಣೆ ಮಾಡಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಡೂರಿನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಕೊಟ್ಟು ಹಕ್ಕುಪತ್ರ ವಿತರಣೆ ಮಾಡಿದ್ದರು. ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅಕ್ರಮ ಹಾಗೂ ಮುಡಾ ನಿವೇಶನ ಹಂಚಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‍ನನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿದೆ.
ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಯೇ ಡೋಲಾಯಮಾನ ಎನ್ನುತ್ತಿರುವಂತೆ ಮತ್ತೊಂದು ಕಡೆ ಬಿಜೆಪಿಯಲ್ಲಿ ಬಣ ಬಡಿದಾಟ ಹೆಚ್ಚಾಗಿರುವಾಗ ಉಪಚುನಾವಣೆ ಸಮರ ಯಾರಿಗೆ ಕಹಿ, ಇನ್ಯಾರಿಗೆ ಸಿಹಿ ಎಂಬುದನ್ನು ಮತದಾರನೇ ತೀರ್ಮಾನಿಸಲಿದ್ದಾನೆ.