ಬೆಂಗಳೂರು,ಅ.16- ಪ್ರತಿಷ್ಟೆಯ ಕಣವಾಗಿ ಪರಿಣಮಿಸಿರುವ ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಆಕಾಂಕ್ಷಿ ಯಾಗಿರುವ ಮಾಜಿ ಸಚಿವ ಹಾಲಿ ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನಡೆ ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಶತಾಯಗತಾಯ ಉಪಚುನಾವಣೆಯಲ್ಲಿ ಗೆದ್ದು ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆಯಲ್ಲಿರುವ ಅಭಿಮಾನಿಗಳ ಪಾಲಿನ ಸೈನಿಕ ಬುಧವಾರ ಬಿಜೆಪಿ ಕಾರ್ಯಕರ್ತರ ಜೊತೆ ಖಾಸಗಿ ರೆಸಾರ್ಟ್‌ನಲ್ಲಿ ಸಭೆ ನಡೆಸಿರುವುದು ಬಿಜೆಪಿ ಮಾತ್ರವಲ್ಲದೆ ಜೆಡಿಎಸ್‌ಗೂ ನುಂಗಲಾರದ ತುತ್ತಾಗಿದೆ.
ಸುಮಾರು 2 ಗಂಟೆಗೂ ಹೆಚ್ಚು ಕಾಲ ನಡೆದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಚುನಾವಣೆಗೆ ಉಮೇದುವಾರಿಕೆ ಮಾಡುವಂತೆ ಸಭೆಯಲ್ಲಿ ಒತ್ತಡ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟರೆ ಪಕ್ಷವು ಅಸ್ತಿತ್ವದಲ್ಲೇ ಉಳಿಯುವುದಿಲ್ಲ.
ಕೊನೆ ಕ್ಷಣದವರೆಗೂ ಟಿಕೆಟ್‌ಗೆ ಪ್ರಯತ್ನಿಸಬೇಕು. ಒಂದು ವೇಳೆ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಹಿಂದೇಟು ಹಾಕಬಾರದೆಂದು ಸಲಹೆ ಮಾಡಿದ್ದಾರೆ.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ನಾವು ಬಿಜೆಪಿ ಅಭ್ಯರ್ಥಿಯಾಗಿದ್ದ ಡಾ.ಮಂಜುನಾಥ್ ಅವರಿಗೆ ಸಂಪೂರ್ಣವಾಗಿ ಬೆಂಬಲ ನೀಡಿದ್ದೆವು. ಕಡೆಪಕ್ಷ ಅದಕ್ಕಾದರೂ ಕುಮಾರಸ್ವಾಮಿಯವರು ಕ್ಷೇತ್ರವನ್ನು ಬಿಟ್ಟುಕೊಡಬೇಕಿತ್ತು. ತಮ ಪುತ್ರನನ್ನು ಕಣಕ್ಕಿಳಿಸುವ ಒಂದೇ ಉದ್ದೇಶದಿಂದ ತಮಗೆ ಕ್ಷೇತ್ರ ಬಿಟ್ಟುಕೊಡಬೇಕೆಂದು ವರಿಷ್ಠರ ಬಳಿ ಪಟ್ಟು ಹಿಡಿದಿದ್ದಾರೆ. ಇದಕ್ಕೆ ಬಗ್ಗದೆ ನೀವು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಿರಿ. ಗೆಲ್ಲಿಸಿಕೊಡುವ ಜವಾಬ್ದಾರಿ ನಮದು ಎಂದು ಕಾರ್ಯಕರ್ತರು ವಾಗ್ದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನಾನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ವರಿಷ್ಠರು ಕೂಡ ನನಗೆ ಟಿಕೆಟ್ ನೀಡಬೇಕೆಂಬ ಇಚ್ಛೆ ಹೊಂದಿದ್ದಾರೆ. ಕುಮಾರಸ್ವಾಮಿ ಚನ್ನಪಟ್ಟಣ ಬಿಟ್ಟುಕೊಟ್ಟರೆ ರಾಮನಗರ ಜಿಲ್ಲೆಯಲ್ಲಿ ತಮ ಅಸ್ತಿತ್ವಕ್ಕೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಕಾರ್ಯಕರ್ತರ ಅಭಿಪ್ರಾಯದಂತೆ ನಡೆದುಕೊಳ್ಳುತ್ತೇನೆ ಎಂದು ಸಭೆಯಲ್ಲಿ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.