Monday, November 25, 2024
Homeರಾಜ್ಯಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಸುಪ್ರೀಂ ನಕಾರ

Supreme Court upholds Anticipatory Bail to Bhavani Revanna in Kidnapping Case

ನವದೆಹಲಿ, ಅ.18- ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದೆ.ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಉಜ್ಜಲ್‌ ಭುಯಾನ್‌ ಅವರ ಪೀಠವು ಕರ್ನಾಟಕ ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ, ಎಸ್‌‍ಐಟಿ ಸಲ್ಲಿಸಿದ ಮನವಿಯನ್ನು ರದ್ದುಗೊಳಿಸಿತು. ಮಗನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯನ್ನು ದೂರು ದಾಖಲಿಸದಂತೆ ತಡೆಯಲು ಭವಾನಿ ರೇವಣ್ಣ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಇನ್ನು ಪ್ರಕರಣದ ವಿಚಾರಣೆ ನಡೆಸಿದ ವೇಳೆ ಸುಪ್ರೀಂಕೋರ್ಟ್‌ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದಿದೆ.

ಪ್ರಕರಣದ ಪ್ರಮುಖರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಆರೋಪಿ ಮಗ ಮತ್ತು ಪತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಜಾಮೀನು ರದ್ದು ಮಾಡಲು ಯಾವುದೇ ಸಕಾರಣ ಕಾಣುತ್ತಿಲ್ಲ. ಪ್ರತಿಷ್ಠಿತ ರಾಜಕೀಯ ಕುಟುಂಬ ಎಂದು ಜಾಮೀನು ರದ್ದು ಮಾಡಲಾಗದು ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪಕ್ಕೆ ಗುರಿಯಾಗಿರುವ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್‌‍ಐಟಿ ಸುಪ್ರೀಂಕೋರ್ಟ್‌ಗೆ ಮೇಲನವಿ ಸಲ್ಲಿಸಿತ್ತು.ಎಸ್‌‍ಐಟಿ ಪರವಾಗಿ ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿದ್ದರು. ಸಂತ್ರಸ್ತೆಯನ್ನು ಕುಟುಂಬದ ನಿರ್ದೇಶನದ ಮೇರೆಗೆ ಬಂಧನದಲ್ಲಿ ಇರಿಸಲಾಗಿತ್ತು. ಇದಕ್ಕೆ ಭವಾನಿ ರೇವಣ್ಣ ನಿರ್ದೇಶನ ನೀಡಿದ್ದರು ಎಂದು ಆರೋಪಿಸಲಾಗಿತ್ತು.

ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಎಸ್‌‍ಐಟಿ ವಕೀಲ ವಿ.ಎನ್‌.ರಘುಪತಿ ಮೂಲಕ ಅರ್ಜಿ ಸಲ್ಲಿಸಿದ್ದರು. ಮೈಸೂರು ಮತ್ತು ಹಾಸನ ಪ್ರವೇಶಿಸುವಂತಿಲ್ಲ ಎಂಬ ಷರತ್ತಿನ ಮೇಲೆ ಅವರಿಗೆ ಜಾಮೀನು ನೀಡಲಾಗಿತ್ತು.

ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಪೊಲೀಸ್‌‍ ಠಾಣೆಯಲ್ಲಿ ಎ್‌‍ಐಆರ್‌ ದಾಖಲಿಸಲಾಗಿತ್ತು. ಪ್ರಕರಣದ ಮೊದಲ ಆರೋಪಿ ಎಚ್‌.ಡಿ. ರೇವಣ್ಣ ಬಂಧನಕ್ಕೊಳಗಾಗಿದ್ದರು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದಲ್ಲಿ ಭವಾನಿ ಅವರ ಹೆಸರೂ ಕೇಳಿ ಬಂದ ಕಾರಣ ಭವಾನಿ ನಿರೀಕ್ಷಣಾ ಜಾಮೀನು ಕೋರಿದ್ದರು. ಇದನ್ನು ವಿಚಾರಣಾ ನ್ಯಾಯಾಲಯ ತಿರಸ್ಕರಿಸಿತ್ತು.

ಎಸ್‌‍ಐಟಿ ವಕೀಲರ ವಾದವೇನು:
ಮೈಸೂರು ಜಿಲ್ಲೆ ಕೆಆರ್‌ ನಗರ ಮಹಿಳೆ ಕಿಡ್ನ್ಯಾಪ್‌ ಆರೋಪ ಸಂಬಂಧ ಭವಾನಿ ರೇವಣ್ಣಗೆ ಜಾಮೀನು ನೀಡಬಾರದು ಎಂದು ಎಸ್‌‍ಐಟಿ ಪರ ವಕೀಲರು ವಾದ ಮಂಡಿಸಿದ್ದಾರೆ. ಆರೋಪಿ ಮಹಿಳೆ ಪ್ರಕರಣದಲ್ಲಿ ನೇರವಾಗಿ ಸಂಬಂಧ ಹೊಂದಿದ್ದಾರೆ. ಅತ್ಯಾಚಾರ ಎಸಗಿದ ಆರೋಪಿಯ ತಾಯಿ ಕೂಡ ಆಗಿದ್ದಾರೆ. ಆರೋಪಿಗಳು ಪ್ರತಿಷ್ಠಿತ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದವರು. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಬೇಕು. ಹೈಕೋರ್ಟ್‌ ನೀಡಿರುವ ನಿರಿಕ್ಷಣಾ ಜಾಮೀನು ರದ್ದು ಮಾಡಬೇಕು ಎಂದು ಸುಪ್ರೀಂಕೋರ್ಟ್‌ನಲ್ಲಿ ಎಸ್‌‍ಐಟಿ ಅಧಿಕಾರಿಗಳ ಪರ ವಕೀಲರು ವಾದ ಮಂಡಿಸಿದ್ದರು.

ಏನಿದು ಪ್ರಕರಣ:
ಜೆಡಿಎಸ್‌‍ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಏಪ್ರಿಲ್‌ನಲ್ಲಿ ಬಹಿರಂಗವಾಗಿತ್ತು. ಆ ವಿಡಿಯೋದಲ್ಲಿ ತನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್‌ ನಗರ ಠಾಣೆಯಲ್ಲಿ ಸಂತ್ರಸ್ತೆಯ ಪುತ್ರ ದೂರು ನೀಡಿದ್ದರು. ಹೆಚ್‌.ಡಿ. ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಎಸ್‌‍ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರನ್ನು ಬಂಧಿಸಲು ಮುಂದಾಗಿದ್ದರು.

ನಂತರ ಜಾಮೀನು ಕೋರಿ ಭವಾನಿ ರೇವಣ್ಣ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಅಲ್ಲಿ ಅವರಿಗೆ ನಿರೀಕ್ಷಣಾ ಜಾಮೀನು ದೊರೆತಿತ್ತು. ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ನಂತರ ಕರ್ನಾಟಕ ಹೈಕೋರ್ಟ್‌ ನೀಡಿದ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಎಸ್‌‍ಐಟಿ ಸುಪ್ರೀಂಕೋರ್ಟ್‌ನಲ್ಲಿ ಮೇಲನವಿ ಸಲ್ಲಿಸಿತ್ತು. ಅದರಂತೆ, ಸುಪ್ರೀಂಕೋರ್ಟ್‌ ಭವಾನಿ ರೇವಣ್ಣಗೆ ನೋಟಿಸ್‌‍ ಜಾರಿ ಮಾಡಿತ್ತು.

RELATED ARTICLES

Latest News