ಬೆಂಗಳೂರು, ಅ.24- ತೀವ್ರ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ.ಪಕ್ಷದ ಕಾರ್ಯಕರ್ತರ ಒತ್ತಡ ಮಣಿದ ಜೆಡಿಎಸ್ ವರಿಷ್ಠರು, ಇಂದು ಮಧ್ಯಾಹ್ನ ಜೆಪಿ ಭವನದಲ್ಲಿ ಮುಖಂಡರೊಂದಿಗೆ ಚರ್ಚಿಸಿ ನಿಖಿಲ್ ಕುಮಾರಸ್ವಾಮಿ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ.
ಅನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ-ಜೆಡಿಎಸ್ ನಾಯಕರು ಮುಖಂಡರ ಸಮ್ಮುಖದಲ್ಲಿ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯ ನಮ್ಮ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಿದ್ದೇವೆ ಎಂದರು.ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ನೂರಕ್ಕೆ ನೂರರಷ್ಟು ಉಪ ಚುನಾವಣೆಯಲ್ಲಿ ಗೆಲ್ಲುತ್ತೇವೆ. ಕೇವಲ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಷ್ಟೇ ಅಲ್ಲ, ಸಂಪೂರ್ಣ ಗೆಲ್ಲುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಒಟ್ಟಾಗಿ ಪ್ರವಾಸ ಕೈಗೊಂಡು ಪ್ರಚಾರ ಮಾಡಿತ್ತೇವೆ. ಪಕ್ಷಾಂತರ ಮಾಡಿದವರ ಮಾತನಾಡುವ ಅಗತ್ಯ ಇಲ್ಲ.ಕುಮಾರಸ್ವಾಮಿ ಅವರು ಅವರ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ನಿಖಿಲ್ ಅವರನ್ನು ಅಭ್ಯರ್ಥಿ ಮಾಡಿದ್ದಾರೆ. ಅದಕ್ಕೆ ನಮ್ಮ ಸಹಮತವಿದೆ ಎಂದು ಅವರು ತಿಳಿಸಿದರು.
ಮೂರನೇ ಬಾರಿಗೆ ಸ್ಪರ್ಧೆ:
ನಿಖಿಲ್ ಕುಮಾರಸ್ವಾಮಿ ಮೂರನೇ ಬಾರಿಗೆ ಚನ್ನಪಟ್ಟಣ ಉಪ ಚುನಾವಣೆ ಮೂಲಕ ಸ್ಪರ್ಧೆಗಿಳಿದ್ದಾರೆ.ಕಳೆದ 2019ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಆಗ ಜೆಡಿಎಸ್ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು.
2023ರ ವಿಧಾನ ಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಈಗ ಮೂರನೇ ಬಾರಿಗೆ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಯಾಗಿ ಕಣಕ್ಕಿಳಿಯಲಿದ್ದಾರೆ. ಎನ್ ಡಿಎ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರೂ, ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ನಾಳೆ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ