ಬೆಂಗಳೂರು,ಅ.29- ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳ ಉಮೇದುವಾರಿಕೆ ಹಿಂದಕ್ಕೆ ಪಡೆಯಲು ನಾಳೆ ಕಡೆಯ ದಿನವಾಗಿದ್ದು, ಶಿಗ್ಗಾವಿಯಲ್ಲಿ ಬಂಡಾಯ ಅಭ್ಯರ್ಥಿ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ.
ನಿನ್ನೆ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳ ಉಪಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ನಡೆದಿದ್ದು, ಸಲ್ಲಿಕೆಯಾಗಿದ್ದ 121 ನಾಮಪತ್ರಗಳ ಪೈಕಿ ಒಟ್ಟು 24 ನಾಮಪತ್ರಗಳು ತಿರಸ್ಕøತಗೊಂಡಿವೆ. ಮೂವರು ಮಹಿಳಾ ಅಭ್ಯರ್ಥಿಗಳು ಹಾಗೂ 61 ಪುರುಷ ಅಭ್ಯರ್ಥಿಗಳು ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಒಟ್ಟು 64 ಅಭ್ಯರ್ಥಿಗಳ ನಾಮಪತ್ರಗಳು ಸ್ವೀಕಾರವಾಗಿವೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೇರಿದಂತೆ 38 ಅಭ್ಯರ್ಥಿಗಳ ನಾಮಪತ್ರಗಳು ಸ್ವೀಕಾರವಾಗಿವೆ.ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು, ಕಾಂಗ್ರೆಸ್ ಅಭ್ಯರ್ಥಿ ಇ.ಅನ್ನಪೂರ್ಣ ಸೇರಿದಂತೆ ಒಟ್ಟು 7 ಅಭ್ಯರ್ಥಿಗಳಿದ್ದಾರೆ.
ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮ್ಮದ್ ಖಾನ್ ಪಠಾಣ್ ಸೇರಿದಂತೆ 19 ಅಭ್ಯರ್ಥಿಗಳ ನಾಮಪತ್ರಗಳು ಸ್ವೀಕಾರಗೊಂಡಿವೆ.ನಾಳೆ ನಾಮಪತ್ರ ಪಡೆಯಲು ಕಡೆಯ ದಿನವಾಗಿದ್ದು, ಸಂಜೆ ವೇಳೆಗೆ ಅಧಿಕೃತವಾಗಿ ಚುನಾವಣಾ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಹೆಸರನ್ನು ಆಯಾ ಕ್ಷೇತ್ರದ ಚುನಾವಣಾ„ಕಾರಿಗಳು ಪ್ರಕಟಿಸಲಿದ್ದಾರೆ.
ಹಾವೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅಜ್ಜಂಪೀರ್ ಖಾದ್ರಿ ಅವರ ಮನವೊಲಿಸುವ ಪ್ರಯತ್ನ ನಡೆದಿದೆ.ಉಮೇದುವಾರಿಕೆ ಸಲ್ಲಿಸಿದ ನಂತರ ಸಚಿವ ಜಮೀರ್ ಅಹಮ್ಮದ್ ಖಾನ್ ಸೇರಿದಂತೆ ಕಾಂಗ್ರೆಸ್‍ನ ಹಲವು ಮುಖಂಡರು ಅಜ್ಜಂಪೀರ್ ಖಾದ್ರಿಯವರ ಮನವೊಲಿಕೆ ಪ್ರಯತ್ನ ನಡೆಸಿದ್ದರಾದರೂ ನಿರೀಕ್ಷಿತ ಫಲ ನೀಡಿಲ್ಲ. ನಾಳೆಯವರೆಗೂ ಕಾದು ನೋಡಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.