ಬೆಂಗಳೂರು,ಅ.29- ಸಿಎಂ ಸಿದ್ದರಾಮಯ್ಯ ಹಾಗೂ ಅಧಿಕಾರಿಗಳಿಂದ ಉಪಚುನಾ ವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಜೆಡಿಎಸ್ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಅ.27 ರಂದು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಬಗ್ಗೆ ಮುಖ್ಯಮಂತ್ರಿಗಳು ಸಭೆ ಮಾಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಅವರು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ದೂರು ಸಲ್ಲಿಸಿರುವ ದೂರಿನಲ್ಲಿ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಸೇರಿಸಿಕೊಂಡು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳು ಗೃಹಕಚೇರಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಉಪಚುನಾವಣೆ ಬಗ್ಗೆ ಚರ್ಚೆ ಮಾಡಿದ್ದಾರೆ ಹಾಗೂ ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ. ಸಭೆ ಮಾಡಿರುವ ಬಗ್ಗೆ ಮಾದ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದ್ದರೂ ಚುನಾವಣಾಧಿಕಾರಿಗಳು ಇದುವರೆಗೂ ಕ್ರಮ ಜರುಗಿಸಿಲ್ಲ ಎಂದು ಆಪಾದಿಸಿದ್ದಾರೆ.