ಬೆಂಗಳೂರು,ಅ.30-ವಕ್ಫ್ ಆಸ್ತಿ ವಿವಾದ ಸೃಷ್ಟಿಸಿರುವ ಸಚಿವ ಜಮೀರ್ ಅಹಮದ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ನವೆಂಬರ್ 4ರಂದು ರಾಜ್ಯಾದ್ಯಂತ ತಾಲ್ಲೂಕು ಮಟ್ಟದಿಂದ ಜಿಲ್ಲಾ ಹಂತದವರೆಗೂ ಪ್ರತಿಭಟನೆಗೆ ಕರೆ ಕೊಟ್ಟಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಮೀರ್ ಅಹಮದ್ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ರೈತರ ಪರವಾಗಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ, ತಹಸೀಲ್ದಾರ್ ಕಚೇರಿಗಳ ಮುಂದೆ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಈ ಸಂಬಂದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಪ್ರತಿಭಟನೆಯಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಲೋಕಸಭಾ ಸದಸ್ಯರು, ಮಾಜಿ ಶಾಸಕರು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಬೇಕೆಂದು ಸೂಚಿಸಿದ್ದಾರೆ. ಕಾಂಗ್ರೆಸ್ ಅಸ್ತಿತ್ವದ ಸರ್ಕಾರವು ರಾಜ್ಯದಲ್ಲಿ ತುಘಲಕ್ ನೀತಿಯನ್ನು ಜಾರಿಗೆ ತರುತ್ತಿದೆ.
ಅಲ್ಪಸಂಖ್ಯಾತ ಸಚಿವ ಜಮೀರ್ ಅಹದ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸೂಚನೆಯಂತೆ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಒತ್ತಡ್ನ ಹೇರುತ್ತಿದ್ದಾರೆ. ಇದರ ಫಲವಾಗಿ ಕರ್ನಾಟಕ ರಾಜ್ಯದ ಬಹುತೇಕ ರೈತರು ತೀವ್ರ ಸಂಕಷ್ಟ ಮತ್ತು ಆತಂಕಕ್ಕೆ ಒಳಗಾಗಿದ್ದಾರೆ. ಅಮಾಯಕ ರೈತರ ಪಹಣಿ ಪತ್ರಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸುವುದರ ಮೂಲಕ ರೈತರ ಜಮೀನನ್ನು ರಾಜ್ಯಾದ್ಯಂತ ಕಬಳಿಸುವ ಹುನ್ನಾರ ನಡೆದಿದೆ.
ಈಗಾಗಲೇ ಸಾವಿರಾರು ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಾಗಿರುವುದರಿಂದ ಕಲಬುರ್ಗಿ, ವಿಜಯಪುರ, ಯಾದಗಿರಿ, ಬೀದರ್, ಶಿವಮೊಗ್ಗ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ರೈತರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ರಚನಾತಕ ಪ್ರತಿಪಕ್ಷವಾಗಿ ನಾವುಗಳು ರೈತರ ಪರವಾಗಿ ನಿಂತು ಸರ್ಕಾರವನ್ನು ಎಚ್ಚರಿಸುವ ಹೋರಾಟಕ್ಕೆ ತಕ್ಷಣಕ್ಕೆ ಧುಮುಕಬೇಕಾದ ಅನಿವಾರ್ಯತೆ ಇರುವುದರಿಂದ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಛೇರಿ ಹಾಗೂ ಎಲ್ಲ ತಹಶೀಲ್ದಾರರ ಕಛೇರಿಗಳ ಮುಂದೆ ನೊಂದ ರೈತರನ್ನೊಳಗೊಂಡಂತೆ ಬೃಹತ್ ಸಂಖ್ಯೆಯಲ್ಲಿ ನ.4ರಂದು ಹೋರಾಟ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿಗಳು ಕೂಡಲೇ ಜಮೀರ್ ಅಹದ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಹಾಗೂ ಅಕ್ರಮವಾಗಿ ಈಗಾಗಲೇ ವಕ್ಫ್ ಆಸ್ತಿ, ಪರಭಾರೆ ನಿಷೇಧಿಸಿದೆ ಎಂದು ನಮೂದಿಸಿರುವ ಪಹಣಿಗಳನ್ನು ತಕ್ಷಣಕ್ಕೆ ಹಿಂಪಡೆಯಬೇಕೆಂದು ಒತ್ತಾಯಿಸಿ ಯಾವುದೇ ರೈತರ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಅವಕಾಶ ನೀಡುವುದಿಲ್ಲವೆಂದು ಸಂಬಂಧಿತ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ ರೈತರ ಪರವಾದಂತಹ ಹೋರಾಟ ಕೈಗೊಳ್ಳಬೇಕೆಂದು ವಿನಂತಿಸುತ್ತೇನೆ ಎಂದಿದ್ದಾರೆ.