ಬೆಂಗಳೂರು,ನ.11- ಗೃಹಲಕ್ಷ್ಮಿ ಸೇರಿದಂತೆ ಕಾಂಗ್ರೆಸ್ ಸರ್ಕಾರ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಸಂಚು ನಡೆಸಿದೆ. ಆದರೆ ಇದು ಸಾಧ್ಯವಾಗುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಗ್ಯಾರಂಟಿಗಳನ್ನು ನಿಲ್ಲಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಅದನ್ನೇ ಹೇಳಿದ್ದಾರೆ. ಆದರೆ ಗ್ಯಾರಂಟಿ ನಿಲ್ಲಿಸಲು ಅವರ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದರು.
ಜನ ಹುಷಾರಾಗಿರಬೇಕು. ತಾಯಂದಿರು ಉತ್ತಮವಾದ ಬದುಕು ನಡೆಸಲಿ ಎಂದು ಗೃಹಲಕ್ಷ್ಮಿಯನ್ನು ನೀಡಲಾಗುತ್ತಿದೆ. ಇದನ್ನು ನಿಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಯತ್ನಿಸುತ್ತಿವೆ ಎಂದು ಹೇಳಿದರು.
ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಬಿಜೆಪಿ ಏನೇ ತಂತ್ರಗಾರಿಕೆ ನಡೆಸಿದರೂ ಯಶಸ್ವಿಯಾಗುವುದಿಲ್ಲ. ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿದಂತೆ ಮೂರೂ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲಿದೆ ಎಂದರು.