Tuesday, December 3, 2024
Homeರಾಜ್ಯ3 ಬಾರಿ ಪೊಲೀಸರಿಗೆ ಚಳ್ಳೇ ಹಣ್ಣು ತಿನ್ನಿಸಿದ್ದ ನಕ್ಸಲ್ ವಿಕ್ರಮ್ ಗೌಡ

3 ಬಾರಿ ಪೊಲೀಸರಿಗೆ ಚಳ್ಳೇ ಹಣ್ಣು ತಿನ್ನಿಸಿದ್ದ ನಕ್ಸಲ್ ವಿಕ್ರಮ್ ಗೌಡ

Notorious Naxal Leader Vikram Gowda killed in encounter in Udupi village


ಬೆಂಗಳೂರು,ನ.19- ಕಳೆದ ರಾತ್ರಿ ಉಡುಪಿ ಜಿಲ್ಲೆಯ ಹೆಬ್ರೀ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಕ್ಸಲ್ ನಿಗ್ರಹ ಪಡೆ ನಡೆಸಿದ ಎನ್ ಕೌಂಟರ್ನಲ್ಲಿ ಹತನಾದ ವಿಕ್ರಮ್ ಗೌಡನಿಗೆ ಮಲೆನಾಡು ಹಾಗೂ ಪಶ್ಚಿಮಘಟ್ಟ ಭಾಗದಲ್ಲಿ ಬಹುದೊಡ್ಡ ಹೆಸರಿತ್ತು.

ಒಂದು ಕಾಲದಲ್ಲಿ ಹಲವು ನಕ್ಸಲೀಯರು ಹೋರಾಟದಿಂದ ಹಿಂದೆ ಸರಿದ ಕಾರಣ ಮಲೆನಾಡು ಹಾಗೂ ಪಶ್ಚಿಮ ಭಾಗದಲ್ಲಿ ಕಳೆದ ಹಲವಾರು ವರ್ಷಗಳಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಈತ ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು ಹಾಗೂ ಬೇರೆ ಬೇರೆ ರಾಜ್ಯಗಳಲ್ಲೂ ಸಹ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ.

ಹೀಗಾಗಿಯೇ ಮೋಸ್ಟ್ ವಾಂಟೆಡ್ ನಕ್ಸಲ್ ಪಟ್ಟಿಯಲ್ಲಿ ವಿಕ್ರಮ್ ಗೌಡನ ಹೆಸರು ಅಗ್ರಸ್ಥಾನದಲ್ಲಿತ್ತು. ಹೀಗಾಗಿಯೇ ಈತನ ಸುಳಿವು ಕೊಟ್ಟವರಿಗೆ ಗೃಹ ಇಲಾಖೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಹಲವಾರು ವರ್ಷಗಳಿಂದ ಘೋಷಣೆ ಮಾಡಿತ್ತಾದರೂ ವಿಕ್ರಂ ಗೌಡ ಎಲ್ಲಿದ್ದಾನೆ, ಆತನ ಚಲನವಲನಗಳ ಬಗ್ಗೆ ಯಾರಿಗೂ ಮಾಹಿತಿ ಇರಲಿಲ್ಲ.

ಚಿಕ್ಕಮಗಳೂರು, ಉಡುಪಿ ಹಾಗೂ ಶಿವಮೊಗ್ಗ ಸೇರಿದಂತೆ ಮತ್ತಿತರ ಕಡೆ ಕೆಲವು ಆಯ್ದ ಯುವಕರನ್ನು ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ಈತ ಪ್ರೇರಪಣೆ ನೀಡುತ್ತಿದ್ದ.ವಿಕ್ರಂ ಗೌಡನ ಮೂಲ ಉಡುಪಿ ಹೆಬ್ರಿ ತಾಲೂಕಿನ ಕೂಡ್ಲು ನಾಡ್ವಾಲು ಗ್ರಾಮ. ದಕ್ಷಿಣ ಭಾರತದಲ್ಲಿ ನಕ್ಸಲ್ ಸಂಘಟನೆಯ ನಾಯಕತ್ವ ತಮಿಳುನಾಡು ಮೂಲದ ಕುಪ್ಪುಸ್ವಾಮಿ ವಹಿಸಿಕೊಂಡಿದ್ದರೆ, ರಾಜ್ಯದಲ್ಲಿನ ಜವಾಬ್ದಾರಿ ವಿಕ್ರಂ ಗೌಡ ಹೆಗಲಿಗೆ ಬಿದ್ದಿತ್ತು.
ಕಾರ್ಮಿಕ ಸಂಘಟನೆಯಿಂದ ಬಂದಿದ್ದ ವಿಕ್ರಮ್ ಗೌಡ ಮೂರು ಬಾರಿ ಕರ್ನಾಟಕ ಪೊಲೀಸರ ಕೈಯಿಂದ ಪರಾರಿಯಾಗಿದ್ದ. 2016ರಲ್ಲಿ ಕೇರಳ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿದ್ದ.

ಇತ್ತೀಚೆಗೆ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.

ನಂತರ ನಕ್ಸಲರ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿದೆ.ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನವಿದೆ.

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಸರ್ಕಾರದ ಯೋಜನೆಗೆ ವಿಕ್ರಂ ಗೌಡ ವಿರೋಧ ಹೊಂದಿದ್ದ. ಅಷ್ಟೇ ಅಲ್ಲದೇ ಈ ಯೋಜನೆಯಲ್ಲಿ ಮುಖ್ಯ ಪಾತ್ರವನ್ನು ವಹಿಸಿದ್ದಕ್ಕೆ ಗೌರಿ ಲಂಕೇಶ್ ವಿರುದ್ಧ ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಿತ್ತಿಪತ್ರಗಳನ್ನೂ ಕೂಡ ಹಂಚಿದ್ದ.

ವಿಕ್ರಮ್ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ. ಆ ಸಂದರ್ಭದಲ್ಲಿ ನಕ್ಸಲ್ ಚಳವಳಿಗೆ ಧುಮುಕಿದ್ದ ವಿಕ್ರಮ್ ಗೌಡ, ನಂತರದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ. ನಕ್ಸಲ್ ಹೋರಾಟದ ವೇಳೆ ಕರಾವಳಿ ಭಾಗದಲ್ಲಿ ನೇತ್ರಾವತಿ ದಳವನ್ನು ಮುನ್ನೆಡೆಸಿದ್ದ. ಮತ್ತೊಂದೆಡೆ, ಮಲೆನಾಡು ಭಾಗದಲ್ಲಿ ಮುಂಡಗಾರು ಲತಾ ತಂಡ ಸಕ್ರಿಯವಾಗಿತ್ತು.

ಕೇರಳದಿಂದ ಆಗಮಿಸಿದ್ದ ನಕ್ಸಲರು:
ಕೇರಳದಲ್ಲಿ ಕೂಡ ಇತ್ತೀಚೆಗೆ ನಕ್ಸಲ್ ಚಟುವಟಿಕೆ ಹೆಚ್ಚಾಗಿತ್ತು. ಅದರ ಬೆನ್ನಲ್ಲೇ ಅಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯೂ ಚುರುಕಾಗಿತ್ತು. ನಂತರ ಅಲ್ಲಿಂದ ಕಾಲ್ಕಿತ್ತಿದ್ದ ನಕ್ಸಲರು, 2 ತಿಂಗಳುಗಳ ಹಿಂದೆ ಕರ್ನಾಟಕಕ್ಕೆ ಆಗಮಿಸಿದ್ದರು.

ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟ ಸಾಲಿನ ಗ್ರಾಮಗಳು ಹಾಗೂ ಚಿಕ್ಕಮಗಳೂರಿನ ಹಲವೆಡೆ ಇತ್ತೀಚೆಗೆ ನಕ್ಸಲರು ಸಭೆ ನಡೆಸಿದ್ದರು. ಕಸ್ತೂರಿ ರಂಗನ್ ವರದಿ ಜಾರಿ, ಅರಣ್ಯ ಒತ್ತುವರಿ ತೆರವು ಸಂಬಂಧ ಸಭೆ ನಡೆಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ಜಿಲ್ಲೆಯ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿತ್ತು.

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆ ವಿರೋಧಿಸಿ ಹುಟ್ಟಿಕೊಂಡಿದ್ದ ನಕ್ಸಲ್ ಚಳುವಳಿ, ನಂತರ ಕರ್ನಾಟಕದ ವಿವಿಧ ಭಾಗಗಳಲ್ಲಿ ದಶಕಗಳ ಕಾಲ ಆತಂಕ ಸೃಷ್ಟಿ ಮಾಡಿತ್ತು. ಆದರೆ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆಯಾದ ಬಳಿಕ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ನಕ್ಸಲ್ ಚಳವಳಿಗೆ ಹೆಚ್ಚಿನ ಬೆಂಬಲ ಸಿಕ್ಕಿರಲಿಲ್ಲ. ಹೀಗಾಗಿ ಪಕ್ಕದ ರಾಜ್ಯ ಕೇರಳಕ್ಕೆ ನಕ್ಸಲರು ಸ್ಥಳಾಂತರಗೊಂಡಿದ್ದರು. ಇದೀಗ ಮತ್ತೆ ಕಸ್ತೂರಿ ರಂಗನ್ ವರದಿ ಜಾರಿ, ಅರಣ್ಯ ಒತ್ತುವರಿ ತೆರವು ವಿಚಾರವಾಗಿ ನಕ್ಸಲರು ಸಭೆಗಳನ್ನು ನಡೆಸಿ ಚಟುವಟಿಕೆ ಆರಂಭಿಸಿದ್ದರು.

RELATED ARTICLES

Latest News