ಬೆಂಗಳೂರು,ನ.15- ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮೇಲನವಿ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ ಎಂದು ಅವರು ಹೇಳಿದರು. ಸುಪ್ರೀಂಕೋರ್ಟ್ನಲ್ಲಿ ಮೇಲನವಿ ಸಲ್ಲಿಸಲು ಹಲವು ಪ್ರಕ್ರಿಯೆಗಳಿವೆ. ಹಾಗಾಗಿ ಸದ್ಯದಲ್ಲೇ ಮೇಲನವಿ ಸಲ್ಲಿಸಲು ತಯಾರಿ ನಡೆಸಲಾಗುತ್ತಿದೆ ಎಂದರು.
ಬೆನ್ನುನೋವಿನ ಚಿಕಿತ್ಸೆಗಾಗಿ ದರ್ಶನ್ಗೆ ಹೈಕೋರ್ಟ್ ಆರು ವಾರ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಅವರು ನಗರದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿಡಲಾಗಿತ್ತು. ಈ ಕಾರಾಗೃಹದಲ್ಲಿ ದರ್ಶನ್, ರೌಡಿ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಹಲವರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಫೋಟೊಗಳು ವೈರಲ್ ಆಗುತ್ತಿದ್ದಂತೆ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು.
ನ್ಯಾಯಾಲಯ ಜಾಮೀನು ನೀಡಿದ ನಂತರ ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್ ಬಿಡುಗಡೆ ಹೊಂದಿದ್ದಾರೆ.