ಬೆಂಗಳೂರು, ಡಿ.6- ಬಹುತ್ವದ ಭಾರತಕ್ಕೆ ಯೋಗ್ಯವಾದ ಸಂವಿಧಾನ ನೀಡಿದ್ದು ಡಾ.ಬಿ.ಆರ್.ಅಂಬೇಡ್ಕರ್. ಸಂವಿಧಾನ ವಿರೋಧಿಸುವವರು ಮೊದಲು ಅದನ್ನು ಓದಿ ತಿಳಿದುಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ರವರ 68ನೇ ಪರಿನಿನಿರ್ವಾಣ ದಿನಾಚರಣೆ ಅಂಗವಾಗಿ, ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್. 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಆ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತದೆ ಎಮದರು.
ತಮ್ಮ ಬದುಕನ್ನು ಸಾಮಾಜಿಕ ಹೋರಾಟ ಹಾಗೂ ಸಮಾಜದ ಪರಿವರ್ತನೆಗಾಗಿ ತೊಡಗಿಸಿಕೊಂಡಿದ್ದ ಅಂಬೇಡ್ಕರ್, ಈ ದೇಶಕ್ಕೆ ಹಾಗೂ ನಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದಾರೆ. ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂದು ಭಾರತೀಯ ಸಂವಿಧಾನ ಖ್ಯಾತಿ ಪಡೆದಿದೆ.
ಸಂವಿಧಾನದ ಶ್ರೇಷ್ಠತೆ ತಿಳಿಯಬೇಕಾದರೆ ಒಳ್ಳೆಯವರ ಕೈಯಲ್ಲಿ ಅದರ ಅನುಷ್ಠಾನವಾಗಬೇಕು. ಕೆಟ್ಟವರ ಕೈಗೆ ಹೋದರೆ ಕೆಟ್ಟದಾಗುತ್ತದೆ ಎಂದು ಅಂಬೇಡ್ಕರ್ ಅವರು ಸ್ಪಷ್ಟವಾಗಿ ಎಚ್ಚರಿಕೆ ನೀಡಿದ್ದರು ಎಂದರು.
ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಅಂಬೇಡ್ಕರ್, ಅವಕಾಶ ವಂಚಿತರು, ಶೋಷಣೆ, ಅನ್ಯಾಯಕ್ಕೆ, ಅವಮಾನಕ್ಕೆ, ದೌರ್ಜನ್ಯಕ್ಕೆ ಒಳಪಟ್ಟ ಎಲ್ಲಾ ವರ್ಗಗಳ ಜನರ ಪರವಾಗಿ ಕೆಲಸ ಮಾಡಿದ್ದರು. ಸಮಾಜದಲ್ಲಿ ಸಮಾನತೆ ಬಯಸಿದ್ದರು, ಅದನ್ನೇ ಪ್ರತಿಪಾದಿಸಿದರು.
ಸಂವಿಧಾನದ ಧ್ಯೇಯೋದ್ದೇಶಗಳೂ ಅದನ್ನೇ ಹೇಳುತ್ತದೆ. ಸಂವಿಧಾನದಿಂದ ಅನುಕೂಲ ಪಡೆದವರು ಅವರ ಸೋದರ ಜನಾಂಗಗಳಿಗೆ ಸಹಾಯ ಮಾಡಬೇಕು. ಎಲ್ಲರೂ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬೇಕೆಂದು ಬಯಸಿದ್ದರು ಎಂದರು.
ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಮಾಡಬಾರದು. ಬಹಳ ಜನ ಸಂವಿಧಾನವನ್ನು ವಿರೋಧಿಸುತ್ತಾರೆ. ಭಾರತ ಬಹುಸಂಸ್ಕೃತಿಯ, ಬಹುತ್ವದ ದೇಶ. ಅನೇಕ ಜಾತಿ, ಧರ್ಮಗಳಿವೆ. ಅನೇಕ ಭಾಷೆಗಳೂ ಇವೆ. ಇದಕ್ಕೆ ಯೋಗ್ಯವಾದ ಸಂವಿಧಾನವನ್ನು ಕೊಟ್ಟವರು ಅಂಬೇಡ್ಕರ್. ಎಲ್ಲಾ ಧರ್ಮಗಳೂ, ಜಾರಿಗಳೂ ಸಮಾನ ಅವಕಾಶ ನೀಡಿ, ಮಾನವ ಧರ್ಮಕ್ಕೆ ಒತ್ತು ನೀಡಿದ್ದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು.
ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು. ಇದನ್ನು ಅಂಬೇಡ್ಕರ್ ಅವರು ತಮ್ಮ ಬದುಕಿನಲ್ಲಿ ಸಾರಿದ್ದರು. ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ಅವರು ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ತಮ್ಮ ಕಡೇ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಸ್ವೀಕಾರ ಮಾಡಿದ ನಂತರ ಬಹಳ ದಿನಗಳ ಕಾಲ ಉಳಿಯಲಿಲ್ಲ.
ಅವರು ಕೊಟ್ಟ ಸಂವಿಧಾನದ ಪ್ರಕಾರ ಮತ್ತು ಅವರ ಹೋರಾಟದ ದಾರಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವುದೇ ಅವರಿಗೆ ನಾವು ಸಲ್ಲಿಸುವ ಗೌರವ. ಅವರ ಆಶಯದಂತೆ ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದರು.