ತುಮಕೂರು,ಜ.20- ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ ಶ್ರೀ ಶಿವಕುಮಾರಸ್ವಾಮೀಜಿಯವರ ಏಳನೆ ಪುಣ್ಯ ಸಂಸ್ಮರಣೋತ್ಸವಕ್ಕೆ ನಾಳೆ ಶ್ರೀ ಸಿದ್ಧಗಂಗಾ ಮಠದಲ್ಲಿ ನಡೆಯಲಿದ್ದು, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಭಾಗಿಯಾಗಲಿದ್ದಾರೆ ಎಂದು ಮಠದ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಜಯವಿಭವಸ್ವಾಮಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 10.40ಕ್ಕೆ ತುಮಕೂರು ವಿವಿ ಹೆಲಿಪ್ಯಾಡ್ಗೆ ಉಪ
ರಾಷ್ಟ್ರಪತಿಗಳು ಆಗಮಿಸಲಿದ್ದು, ಅಲ್ಲಿಂದ ನೇರವಾಗಿ ಶ್ರೀ ಮಠಕ್ಕೆ ತೆರಳಿ ಡಾ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ ಎಂದರು. ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ, ಕಿರಿಯ ಶ್ರೀಗಳಾದ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿಗಳು ಸೇರಿದಂತೆ ವಿವಿಧ ಮಠಾಧೀಶರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಉಪರಾಷ್ಟ್ರಪತಿ ಸಿ.ಪಿ.ರಾಧಾ ಕೃಷ್ಣನ್ ಉದ್ಘಾಟಿಸಲಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಜಲಶಕ್ತಿ ಮತ್ತು ರೈಲ್ವೇಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಗೃಹಸಚಿವ ಡಾ ಜಿ.ಪರಮೇಶ್ವರ್, ಸಂಸದ ರಾದ ಗೋವಿಂದಕಾರಜೋಳ, ಡಾ ಸಿ.ಎನ್.ಮಂಜು ನಾಥ್, ಶಾಸಕರಾದ ಜಿ.ಬಿ.ಜ್ಯೋತಿ ಗಣೇಶ್, ಬಿ.ಸುರೇಶ್ಗೌಡ, ಟಿ.ಬಿ.ಜಯಚಂದ್ರ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ ಎಂದರು.
ಸುಮಾರು 7-8ಸಾವಿರ ಜನರಿಗೆ ಕುಳಿತುಕೊಂಡು ಕಾರ್ಯಕ್ರಮ ವೀಕ್ಷಿಸಲು ಆಸನದ ವ್ಯವಸ್ಥೆ ಮಾಡಲಾಗಿದ್ದು, ವೇದಿಕೆಯ ಬಲಭಾಗ 200 ಮಠದ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಲಿದ್ದಾರೆ, ಕಾರ್ಯಕ್ರಮಕ್ಕೆ ಸುಮಾರು 30-40 ಸಾವಿರ ಭಕ್ತರು ಬರಲಿದ್ದಾರೆ ಎಂದು ತಿಳಿಸಿದರು.
ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ ಮಾತನಾಡಿ, ಪೂಜ್ಯರ ಪುಣ್ಯಸರಣೆಗೆ ಬೆಳಿಗ್ಗೆ 7ರಿಂದ 11ರವರೆಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ನಂತರ ಬೆಳಿಗ್ಗೆ 11-30ರಿಂದ ರಾತ್ರಿ 11-30ರವರೆಗೆ ನಿರಂತರ ಅನ್ನ ದಾಸೋಹ ನಡೆಯಲಿದೆ ಎಂದು ಹೇಳಿದರು.
6 ಕಡೆ ಕೊಪ್ಪಲು ಹಾಕಲಾಗಿದೆ, ಹೊಸ ಪ್ರಸಾದ ನಿಲಯ, ಹಳೆಯ ಪ್ರಸಾದ ನಿಲಯ, ಸಾದರ ಕೊಪ್ಪಲು ಹೀಗೆ ಎಲ್ಲಾ ಕಡೆ ಟೇಬಲ್ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಂದು ಬಾರಿಗೆ 8 ಸಾವಿರ ಜನ ಒಟ್ಟಿಗೆ ಕುಳಿತು ಊಟ ಮಾಡಬಹುದು ಎಂದು ತಿಳಿಸುತ್ತಾ ಊಟಕ್ಕೆ ಸುಮಾರು 1ರಿಂದ 1ಲಕ್ಷದ 25ಸಾವಿರ ಜನ ಬರಬಹುದು ಎಂದು ಅಂದಾಜಿಸಲಾಗಿದೆ ಎಂದರು.
ಜಂಟಿ ಕಾರ್ಯದರ್ಶಿ ಪ್ರೊ.ಶಿವಕುಮಾರಯ್ಯ ಮಾತನಾಡಿ, ವೇದಿಕೆಯಲ್ಲಿ ಬೆಳಿಗ್ಗೆ 8 ರಿಂದ 10.30ರವರೆಗೆ ಸುಗಮ ಸಂಗೀತ ನಡೆಯಲಿದ್ದು, ಸಂಜೆ 4ರಿಂದ ಮಠದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 3 ಗಂಟೆಗೆ ಪೂಜ್ಯರ ಗದ್ದುಗೆಗೆ ಮಹಾರುದ್ರಾಭಿಷೇಕ ನಡೆಯಲಿದ್ದು ನಂತರ ಪೂಜ್ಯರ ಪ್ರತಿಮೆಯ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಠದ ಕಾರ್ಯದರ್ಶಿ ಟಿ.ಕೆ.ನಂಜುಂಡಪ್ಪ, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹಿಮಂತ್ ರಾಜು, ಎಎಸ್ಪಿ ಪುರುಷೋತ್ತಮ್ ಉಪಸ್ಥಿತರಿದ್ದರು.
