ಬೆಂಗಳೂರು, ಜ.11- ಬಿಬಿಎಂಪಿ, ಜಿಲ್ಲಾ ಮತ್ತು ತಾಲ್ಲೂಕು ಚುನಾವಣೆ ಸಿದ್ಧತೆ ಕುರಿತಂತೆ ನಾಳೆ ಜೆಡಿಎಸ್ ಸಭೆ ನಡೆಯಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಜೆಪಿ ಭವನದಲ್ಲಿ ಸಭೆ ಜರುಗಲಿದೆ. ಸಭೆಯಲ್ಲಿ ಪ್ರಚಲಿತ ರಾಜಕೀಯ ವಿದ್ಯಮಾನ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ, ಪಕ್ಷದ ಸಂಘಟನೆ, ಸದಸ್ಯತ್ವ ನೋಂದಣಿ ಚುರುಕುಗೊಳಿಸುವುದು, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಪರ ಹೋರಾಟಗಳನ್ನು ಹಮಿಕೊಳ್ಳುವುದು ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಿ, ಸೂಕ್ತ ಮಾರ್ಗದರ್ಶನವನ್ನು ವರಿಷ್ಠರು ಮಾಡಲಿದ್ದಾರೆ.
ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜರುಗುವ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಭಾಗವಹಿಸಲಿದ್ದಾರೆ. ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಸಂಸದರು, ಮಾಜಿ ಸಂಸದರು, ಮಾಜಿ ಸಚಿವರು, ರಾಜ್ಯಮಟ್ಟದ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಮತ್ತು ತಾಲ್ಲೂಕು ಅಧ್ಯಕ್ಷರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಇತ್ತೀಚೆಗೆ ನಡೆದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸೋಲಿನ ಬಗ್ಗೆ ಈಗಾಗಲೇ ಪಕ್ಷದ ವೇದಿಕೆಯಲ್ಲಿ ಚರ್ಚಿಸಿದ್ದು, ಕಾರ್ಯಕರ್ತರು ಧೃತಿಗೆಡದೆ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬಲಗೊಳಿಸಲು ವರಿಷ್ಠರು ಈಗಾಗಲೇ ಸಲಹೆ ಮಾಡಿದ್ದಾರೆ. ನಾಳಿನ ಸಭೆಯಲ್ಲಿ ಉಪ ಚುನಾವಣೆಯ ಸೋಲಿಗೆ ಕಾರಣವಾಗಿದ್ದ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಮುಂಬರುವ ಚುನಾವಣೆಯನ್ನು ಎದುರಿಸುವ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ. ಜತೆಗೆ ಎನ್‌ಡಿಎ ಮಿತ್ರಪಕ್ಷ ಬಿಜೆಪಿ ಜತೆಗೂಡಿ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಸೀಟು ಹಂಚಿಕೆ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ. ಅಲ್ಲದೆ, ಮೈಸೂರಿನಿಂದ ಜಿಲ್ಲಾ ಮತ್ತು ತಾಲ್ಲೂಕು ಚುನಾವಣೆ ಪ್ರಚಾರ ಆರಂಭಿಸುವ ಬಗ್ಗೆಯೂ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.