Wednesday, February 5, 2025
Homeರಾಷ್ಟ್ರೀಯ | Nationalದೆಹಲಿ ವಿಧಾನಸಭಾ ಚುನಾವಣೆ : ನಾಳೆ ಮತದಾನ, ಭಾರೀ ಭದ್ರತೆ

ದೆಹಲಿ ವಿಧಾನಸಭಾ ಚುನಾವಣೆ : ನಾಳೆ ಮತದಾನ, ಭಾರೀ ಭದ್ರತೆ

Delhi Assembly Elections: Voting tomorrow, heavy security

ನವದೆಹಲಿ,ಜ.4- ಹಿಂದೆಂದೂ ಕಾಣದ ಜಿದ್ದಾ ಜಿದ್ದಿನ ಕುರುಕ್ಷೇತ್ರವಾಗಿರುವ ರಾಷ್ಟ್ರ ರಾಜಧಾನಿ ನವದೆಹಲಿಯ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರ ಬರೆಯಲಿದ್ದಾನೆ.

ಸಾಮಾನ್ಯ ಆಡಳಿತ ಇಲಾಖೆ ಹೊರಡಿಸಿರುವ ಅಧಿಸೂಚನೆಯಲ್ಲಿ ಮತದಾನದ ದಿನವಾದ ನಾಳೆ ದೆಹಲಿ ಸರ್ಕಾರ ಸಾರ್ವಜನಿಕ ರಜಾದಿನವೆಂದು ಘೋಷಿಸಿದೆ. ನಗರದಾದ್ಯಂತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಲಯದ ಕಚೇರಿಗಳಿಗೆ ರಜೆ ಅನ್ವಯಿಸಲಿದೆ ಎಂದು ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ತಿಳಿಸಿದ್ದಾರೆ.

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರವರಿ 5 ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ.ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಒಟ್ಟು 1.56 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.ಕಣದಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.

ಈಗಾಗಲೇ ಬಹಿರಂಗ ಚುನಾವಣಾ ಪ್ರಚಾರ ಅಂತ್ಯಗೊಂಡಿದ್ದು, ಚುನಾವಣಾ ಅಧಿಕಾರಿ/ ಸಿಬ್ಬಂದಿಗಳು ಇಂದು ಸಂಜೆ ಮತಗಟ್ಟೆಗಳಿಗೆ ತಲುಪಿದ್ದಾರೆ, ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ರಾಜ್ಯದ ಆಡಳಿತ ಪಕ್ಷ ಎಎಪಿ. ಈ ಬಾರಿ ಚುನಾವಣೆಯಲ್ಲಿ ಎಎಪಿ, ಕಾಂಗ್ರೆಸ್ ಮತ್ತು ಬಿಜೆಪಿ ತ್ರಿಕೋಣ ಸ್ಪರ್ಧೆ ಇದೆ.

ಚುನಾವಣೆಯನ್ನು ನ್ಯಾಯಸಮತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ರೀತಿಯಲ್ಲಿ ತಯಾರಿ ನಡೆಸಿದೆ. 3 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಎಲ್ಲವೂ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಆದ್ದರಿಂದ ಚುನಾವಣಾ ಭದ್ರತೆಗೆ ಹೆಚ್ಚಿನ ಗಮನ ನೀಡಲಾಗಿದೆ. 150 ಪ್ಯಾರಾ ಮಿಲಿಟರಿ ಪಡೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಅಲ್ಲದೇ ದೆಹಲಿಯ ತುಂಬಾ 30,000 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಅರವಿಂದ ಕೇಜ್ರಿವಾಲ್ ಆಕ್ಷೇಪ: ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ,ಚುನಾವಣಾ ಭದ್ರತೆಗೆ ಗುಜರಾತ್ ಪೊಲೀಸ್ ತುಕಡಿ ನಿಯೋಜನೆ ಮಾಡಿರುವುದಕ್ಕೆ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ಆದರೆ ಚುನಾವಣಾ ಆಯೋಗ ಈ ಕುರಿತು ಸ್ಪಷ್ಟನೆ ನೀಡಿತ್ತು. ಉತ್ತರ ಪ್ರದೇಶದಲ್ಲಿ ಮಹಾಕುಂಭ ಮೇಳ ನಡೆಯುತ್ತಿರುವ ಕಾರಣ ಅಕ್ಕಪಕ್ಕದ ರಾಜ್ಯಗಳ ಪೊಲೀಸರು ಅಲ್ಲಿಗೆ ಭದ್ರತೆಗೆ ನಿಯೋಜನೆಗೊಂಡಿದ್ದಾರೆ. ಆದ್ದರಿಂದ ಗುಜರಾತ್, ಕರ್ನಾಟಕದ ಪೊಲೀಸ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಹೇಳಿತ್ತು.

ಆಯೋಗದ ದೆಹಲಿ ಚುನಾವಣೆ ಉಸ್ತುವಾರಿ ದೆವೇಶ್ ಚಂದ್ರ ಶ್ರೀವಾಸ್ತವ್ ಮಾತನಾಡಿ, ದೆಹಲಿ ಚುನಾವಣೆಗೆ ಅಗತ್ಯ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆಯಿಂದ ಚುನಾವಣೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. ಜನವರಿ ಅಂತ್ಯದಲ್ಲಿ ದೆಹಲಿ ಪೊಲೀಸರು ಅಂತರರಾಜ್ಯ ಪೊಲೀಸ್ ಅಧಿಕಾರಿಗಳ ಸಭೆಯನ್ನು ನಡೆಸಿದ್ದರು. ಚುನಾವಣೆ ಹಿನ್ನಲೆಯಲ್ಲಿ ಮದ್ಯ, ಹಣ, ಡ್ರಗ್ಸ್ ಸಾಗಣೆ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದು ವಿವಿಧ ರಾಜ್ಯಗಳ ಪೊಲೀಸರಿಗೆ ಮನವಿ ಮಾಡಿದ್ದರು.

ಎಎಪಿ 2015, 2020ರ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚನೆ ಮಾಡಿದೆ. ಈ ಬಾರಿಯೂ ಗೆದ್ದು ಹ್ಯಾಟ್ರಿಕ್ ಗೆಲುವು ದಾಖಲಿಸುವ ಉತ್ಸಾಹದಲ್ಲಿದೆ. ಆದರೆ ಎಎಪಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದೆ ಎಂದು ಬಿಜೆಪಿ, ಕಾಂಗ್ರೆಸ್ ಹೇಳುತ್ತಿದ್ದು, ಜನರು ತಮಗೆ ಬೆಂಬಲ ನೀಡಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ.ಅಂತಿಮವಾಗಿ ಮತದಾರರ ನಾಡಿಮಿಡಿತ ಏನೆಂಬುದು ಶನಿವಾರ ಗೊತ್ತಾಗಲಿದೆ

RELATED ARTICLES

Latest News