Wednesday, February 5, 2025
Homeರಾಜ್ಯಮುಖ್ಯಮಂತ್ರಿ ಸಿದ್ದರಾಮಯ್ಯನವರು ಬದಲಾವಣೆಯಾಗುವುದಿಲ್ಲ : ಸಚಿವ ಕೆ.ಎಚ್‌.ಮುನಿಯಪ್ಪ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬದಲಾವಣೆಯಾಗುವುದಿಲ್ಲ : ಸಚಿವ ಕೆ.ಎಚ್‌.ಮುನಿಯಪ್ಪ

Chief Minister Siddaramaiah will not be changed: Minister K.H. Muniyappa

ಬೆಂಗಳೂರು,ಫೆ.5- ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬದಲಾವಣೆಯಾಗುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿದ್ದು ನಮಲ್ಲಿ ನಾಯಕತ್ವದ ಬದಲಾವಣೆಯ ಚರ್ಚೆಯೇ ಇಲ್ಲ.

ಸಿದ್ದರಾಮಯ್ಯನವರು ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ. ಹೀಗಾಗಿ ಅವಧಿಪೂರ್ತಿ ಅವರೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದ್ದಾರೆ.ಮುಖ್ಯಮಂತ್ರಿ ಬದಲಾವಣೆ ವಿಚಾರ ಬಂದಾಗ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ. ಈಗ ಅಂತಹ ಯಾವುದೇ ಪರಿಸ್ಥಿತಿ ಇಲ್ಲ. ಸರ್ಕಾರದಿಂದ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲಾಗುತ್ತದೆ. ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದು, ಮುಂದಿನ ತಿಂಗಳು ಉತ್ತಮ ಬಜೆಟ್‌ ಕೂಡ ಮಂಡಿಸಲಿದ್ದಾರೆ. ಹೀಗಾಗಿ ಅವರನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಕೆಲವು ಸಚಿವರು ಮತ್ತು ಶಾಸಕರು ದೆಹಲಿಗೆ ಹೋಗಿ ಕಾಂಗ್ರೆಸ್‌‍ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಬದಲಾಯಿಸುವಂತೆ ಒತ್ತಡ ಹೇರುತ್ತಿರುವುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಯಾರೂ ಈ ಬಗ್ಗೆ ನನ್ನೊಂದಿಗೆ ಚರ್ಚೆ ನಡೆಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ವಿರೋಧಪಕ್ಷಗಳು ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯಾಗಲಿದೆ ಎಂದು ಹುಯಿಲೆಬ್ಬಿಸುತ್ತಿರುವ ನಡುವೆಯೇ ಸಂಪುಟದ ಪ್ರಮುಖ ಸಚಿವರು ಅದರಲ್ಲೂ ಎಐಸಿಸಿಯ ವಿಶೇಷ ಆಹ್ವಾನಿತರಾಗಿರುವ ಮುನಿಯಪ್ಪ ಅವರ ಹೇಳಿಕೆ ಗಮನ ಸೆಳೆದಿದೆ. ಕೆಲವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಬದಲಾವಣೆಯಾದರೂ ಆಗಬಹುದು ಎಂಬರ್ಥದಲ್ಲಿ ಕೆಲವರು ಹೇಳಿದರೆ, ಇನ್ನೂ ಕೆಲವರು ಡಿ.ಕೆ.ಶಿವಕುಮಾರ್‌ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಿದ್ದಾರೆ.

ಕಳೆದೆರಡು ದಿನಗಳ ಹಿಂದೆ ಚನ್ನಪಟ್ಟಣದಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಶಾಸಕ ಎಚ್‌.ಸಿ.ಬಾಲಕೃಷ್ಣ, ಡಿ.ಕೆ.ಶಿವಕುಮಾರ್‌ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಿದರು. ಈ ರೀತಿಯ ಕೆಲವು ಶಾಸಕರು ಹೈಕಮಾಂಡ್‌ನ ಸೂಚನೆಯನ್ನೂ ಮೀರಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಲಾರಂಭಿಸಿದ್ದಾರೆ. ಇಂತಹ ವೇಳೆ ಮುನಿಯಪ್ಪ ಅವರ ಹೇಳಿಕೆ ಪ್ರಮುಖ ಪಾತ್ರ ವಹಿಸಿದೆ.ನಗರದಲ್ಲಿಂದು ಮಾತನಾಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಕೂಡ ನಮಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಇಲ್ಲ ಎಂದು ಹೇಳಿದರು.

ವಿರೋಧಪಕ್ಷಗಳು ಅದರಲ್ಲೂ ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್‌.ಅಶೋಕ್‌ ನವೆಂಬರ್‌ ವೇಳೆಗೆ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಹೇಳುತ್ತಿರುವುದು ಅರ್ಥಹೀನ. ಕಾಂಗ್ರೆಸ್‌‍ನಲ್ಲಂತೂ ಅಂತಹ ಯಾವುದೇ ಬೆಳವಣಿಗೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಕೃಷಿ ಸಚಿವ ಚಲುವರಾಯಸ್ವಾಮಿ ಕೂಡ ಸಿದ್ದರಾಮಯ್ಯನವರ ಪರವಾಗಿ ಬ್ಯಾಟ್‌ ಬೀಸಿದ್ದಾರೆ.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಂದೂ 5 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಿಲ್ಲ. ಆದರೆ ಬೇರೆಯವರ ವಿಚಾರದಲ್ಲಿ ಪದೇಪದೇ ಹೇಳಿಕೆ ನೀಡಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.ಕಾಂಗ್ರೆಸ್‌‍ನಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂಬ ಗಟ್ಟಿ ಧ್ವನಿಗಳ ಅಭಿಪ್ರಾಯವನ್ನು ಹಿಡಿದು ಅಲ್ಲಲ್ಲಿ ಕೆಲವರು ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬಿಂಬಿಸುವ ಮೂಲಕ ಶಂಕಾಸ್ಪದ ಚರ್ಚೆಗಳಿಗೆ ತುಪ್ಪ ಸುರಿಯುತ್ತಿದ್ದಾರೆ.

RELATED ARTICLES

Latest News