ಬೆಂಗಳೂರು, ಫೆ.17- ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿದೆ ಎಂದು ಜೆಡಿಎಸ್ ಆರೋಪಿಸಿದೆ.
ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಖಜಾನೆಯಲ್ಲಿ ಹಣವಿಲ್ಲ. ಅಭಿವೃದ್ಧಿಗೆ ಅನುದಾನ ಇಲ್ಲ, ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ. ಗುತ್ತಿಗೆದಾರರಿಗೆ ಬಾಕಿ ಹಣ ಕೊಡುತ್ತಿಲ್ಲ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೊಗಳೆ ಸರ್ಕಾರದ ದಯನೀಯ ಸ್ಥಿತಿ ಎಂದು ಟೀಕಿಸಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಸಾವಿರಾರು ಹೊರಗುತ್ತಿಗೆ ನೌಕರರಿಗೆ ಕಳೆದ 6 ತಿಂಗಳಿಂದ ಸಂಬಳ ನೀಡದೆ ಸತಾಯಿಸುತ್ತಿದೆ. ಕಂದಾಯ ಸಚಿವ ಕೃಷ್ಣಭೈರೇಗೌಡ ಅವರೇ ನೀವು ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ವೇತನ ಪಡೆಯುತ್ತಿದ್ದೀರಿ ಅಲ್ಲವೇ? ಎಂದು ಪ್ರಶ್ನಿಸಿದೆ.
ವೇತನ ಸಿಗದೆ ಡೇಟಾ ಎಂಟ್ರಿ ಆಪರೇಟರ್‌ಗಳ ಮತ್ತು ಇಂಜಿನಿಯರ್‌ಗಳ ಬದುಕು ಮೂರಾಬಟ್ಟೆಯಾಗಿ ಬೀದಿಗೆ ಬಂದಿದೆ ಎಂದು ಜೆಡಿಎಸ್ ಆರೋಪಿಸಿದೆ.