ಬೆಂಗಳೂರು, ಫೆ.24- ನಗರದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯನ್ನು ಬಿಡಬ್ಲ್ಯೂಎಸ್‌ಎಸ್‌ಬಿಗೆ ಹಸ್ತಾಂತರಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಅವರು, ಬೆಂಗಳೂರು ನಗರದ ನಾಗರಿಕರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಜವಾಬ್ದಾರಿಯನ್ನು ಬೆಂಗಳೂರು ಜಲಮಂಡಳಿ ನಿರ್ವಹಿಸುತ್ತದೆ.
ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯನ್ನು ಬಿಬಿಎಂಪಿ ನಿರ್ವಹಣೆ ಮಾಡುತ್ತಿದೆ ಎಂದು ವಿವರಿಸಿದ್ದಾರೆ. ಒಂದು ವೇಳೆ ಕೊಳವೆ ಬಾವಿಗಳು ಬತ್ತಿ ಹೋದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳಿಗೆ ಜಲಮಂಡಳಿ ಮುಖಾಂತರವೇ ನೀರು ಪೂರೈಕೆ ಮಾಡಬೇಕಾಗುತ್ತದೆ.
ಈ ಸಮಯದಲ್ಲಿ ಸಮನ್ವಯತೆ ಕೊರತೆ ಉಂಟಾಗಿ ನಾಗರಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ನೀರು ಸರಬರಾಜು ನಿರ್ವಹಣೆಯನ್ನು ನಿಭಾಯಿಸುತ್ತಿರುವ ಬಿಡಬ್ಲ್ಯೂಎಸ್‌ಎಸ್‌ಬಿಗೆ ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ವಹಣೆಯನ್ನು ವಹಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.