ಬೆಂಗಳೂರು,ಫೆ.24- ನಗರ, ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪೂರ್ವ ತಯಾರಿ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ಸರಣಿ ಸಭೆಗಳನ್ನು ನಡೆಸಿದರು.
ಬೆಳಿಗ್ಗೆ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಸ್ಪರ್ಧಿಸಿ ಸೋಲು ಕಂಡ ಅಭ್ಯರ್ಥಿಗಳ ಜೊತೆ ಸಭೆ ನಡೆಸಿದರು. ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಿಂದಲೂ ಸೋಲು ಕಂಡ ಅಭ್ಯರ್ಥಿಗಳು ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಕೆಪಿಸಿಸಿಯ ಸಮನ್ವಯಕಾರರೊಂದಿಗೆ ಡಿ.ಕೆ.ಶಿವಕುಮಾರ್ ಸಮಾಲೋಚನೆ ನಡೆಸಿದ್ದಾರೆ.
ಮೇ ತಿಂಗಳಿನಲ್ಲಿ ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಇತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ನ್ಯಾಯಾಲಯದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕುರಿತ ಪ್ರಕರಣದ ತೀರ್ಪಿಗಾಗಿ ನಿರೀಕ್ಷಿಸಲಾಗುತ್ತಿದ್ದು, ಈ ನಡುವೆ ಪಕ್ಷದ ವತಿಯಿಂದ ಚುನಾವಣಾ ತಯಾರಿಯ ಬಗ್ಗೆ ಸಭೆಗಳನ್ನು ಆರಂಭಿಸಲಾಗಿದೆ. ಶಾಸಕರು, ಸಚಿವರ ಜೊತೆ ಸಭೆ ನಡೆಸುವ ಮೊದಲು ಮಾಜಿ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಜೊತೆ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿರುವುದು ಮಹತ್ವ ಪಡೆದುಕೊಂಡಿದೆ.
ಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳು ತಮಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆಯುತ್ತಿಲ್ಲ ಎಂಬ ಅಸಮಾಧಾನ ಹೊರಹಾಕಿದ್ದಾರೆ. ಸಚಿವರು ನಮ್ಮ ಪತ್ರಗಳನ್ನು ಪರಿಗಣಿಸುತ್ತಿಲ್ಲ. ವರ್ಗಾವಣೆ, ಅನುದಾನ ಬಿಡುಗಡೆ ಸೇರಿದಂತೆ ಹಲವಾರು ವಿಚಾರಗಳಲ್ಲಿ ಕಡೆಗಣಿಸಲಾಗುತ್ತಿದೆ ಮತ್ತು ಅನ್ಯಪಕ್ಷಗಳಿಂದ ವಲಸೆ ಬಂದವರ ಪತ್ರಗಳಿಗೆ ಹೆಚ್ಚಿನ ಮಾನ್ಯತೆ ದೊರೆಯುತ್ತಿದೆ.
ನಮ್ಮದೇ ಪಕ್ಷದಲ್ಲಿ ನಾವು ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದ್ದೇವೆ ಎಂದು ಕೆಲವು ಮುಖಂಡರು ಅಸಮಾಧಾನ ಹೊರಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.