ಬೆಂಗಳೂರು, ಮಾ.3- ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಗೆ ಗ್ಯಾರಂಟಿ ದಿನಾಂಕ ಘೋಷಿಸುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಜೆಡಿಎಸ್ ನಗರದಲ್ಲಿಂದು ಪ್ರತಿಭಟನೆ ನಡೆಸಿತು.
ಫ್ರೀಡಂಪಾರ್ಕ್ ಉದ್ಯಾನವನದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಶಾಸಕರಾದ ಸ್ವರೂಪ್ ಪ್ರಕಾಶ್, ಹರೀಶ್ ಗೌಡ, ಜವರಾಯಿ ಗೌಡ, ಜೆಡಿ ಎಸ್ ಯುವ ಘಟಕದ ನಾಯಕ ನಿಖಿಲ್ ಕುಮಾರಸ್ವಾಮಿ, ಎಂ.ಟಿ.ಕೃಷ್ಣಪ್ಪ, ಜೆಡಿಎಸ್ ಯುವಕ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ರಮೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಘೋಷಣೆ ಕೂಗಲಾಯಿತು. ಸರ್ಕಾರದ ವಿರುದ್ಧ ಫಲಕಗಳನ್ನು ಪ್ರದರ್ಶಿಸಿ ಜೆಡಿಎಸ್ ಪ್ರತಿಭಟನೆ ನಡೆಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಂ.ಟಿ.ಕೃಷ್ಣಪ್ಪ, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ತುಂಬುತ್ತಿದೆ. ಅಭಿವೃದ್ಧಿ ಏನೆಂಬುದೇ ಕಾಂಗ್ರೆಸ್‌ಗೆ ಗೊತ್ತಿಲ್ಲ. ಇಂಥ ಕೆಟ್ಟ ಸರ್ಕಾರ ಈತನಕ ಯಾರೂ ನೋಡಿಲ್ಲ. ಮುಂದೆಯೂ ನೋಡಲ್ಲ ಎಂದು ವಾಗ್ದಾಳಿ ನಡೆಸಿದರು. ರಸ್ತೆ ಗುಂಡಿ ಮುಚ್ಚಲು ಹಣವಿಲ್ಲ.
ಮಾತೆತ್ತಿದರೆ ಗ್ಯಾರಂಟಿ ಎನ್ನುತ್ತಾರೆ. ದೆಹಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಭರವಸೆ ಫಲ ನೀಡಲಿಲ್ಲ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಯನ್ನು ಮಾಡುತ್ತಿಲ್ಲ. ಚುನಾವಣೆಯಾದರೆ ಮತ್ತೆ ಕಾಂಗ್ರೆಸ್‌ಗೆ ಬಹುಮತ ದೊರೆಯುವುದಿಲ್ಲ. ಪೆಟ್ರೋಲ್, ಡೀಸೆಲ್, ಬಸ್ ಪ್ರಯಾಣ ದರ, ಮುದ್ರಾಂಕ ಶುಲ್ಕ ಹೆಚ್ಚಳ ಮಾಡಿದ್ದಾರೆ. ಈ ಸರ್ಕಾರದಲ್ಲಿ 60% ಕಮೀಷನ್ ಆರೋಪವಿದೆ ಎಂದು ದೂರಿದರು.