ಬೆಂಗಳೂರು, ಮಾ.7- ರೇಷ್ಮೆ ಬೆಳೆಗಾರರ ಉತ್ತೇಜನಕ್ಕಾಗಿ ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ನಬಾರ್ಡ್ ಸಹಯೋಗದಲ್ಲಿ ಮೈಸೂರಿನಲ್ಲಿ ರೇಷ್ಮೆ ಗೂಡಿನ ಮಾರುಕಟ್ಟೆ ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
2025-26ನೆ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು, ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆಗೂಡಿನ ಮಾರುಕಟ್ಟೆಯ ಮೊದಲನೆ ಹಂತದ ಕಾಮಗಾರಿಗಳು ಮುಕ್ತಾಯಗೊಳ್ಳಲಿದ್ದು, ಪ್ರಸಕ್ತ ಸಾಲಿನಲ್ಲಿ ಎರಡನೆ ಹಂತದ ಕಾಮಗಾರಿಗಳನ್ನು 250 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದರು.
ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆ ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೋಣೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳನ್ನು ಸ್ಥಾಪಿಸಲು ಪ್ರೋತ್ಸಾಹಿಸಲಾಗುವುದು ಎಂದರು.
ರೇಷ್ಮೆಗೂಡಿಗೆ ಸೂಕ್ತ ಬೆಲೆ ದೊರಕಿಸಲು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟ ಸಾಧಿಸುವ ದೃಷ್ಟಿಯಿಂದ ಮಾರುಕಟ್ಟೆಗಳಲ್ಲಿ ಗುಣಮಟ್ಟ ಪರೀಕ್ಷೆ ಮತ್ತು ಶ್ರೇಣೀಕರಣದ ಕಾರ್ಯಕ್ಕಾಗಿ ಅಸೆಯರ್‌ಗಳನ್ನು ನಿಯೋಜಿಸಲಾಗುವುದು. ರೇಷ್ಮೆ ಬೆಳೆ ವಿಸ್ತರಿಸಲು ರೇಷ್ಮೆಗೂಡಿನ ಪೂರ್ವ ಮತ್ತು ನಂತರದ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ರೇಷ್ಮೆ ಅಭಿವೃದ್ಧಿ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 55 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದರು.