ಬೆಂಗಳೂರು, ಮಾ.7– ಸಾರಿಗೆ ಇಲಾಖೆಯ ಅಧೀನ ಕಚೇರಿಗಳಲ್ಲಿರುವ ಎಲ್ಲಾ ದಾಖಲೆಗಳನ್ನು ಹಂತಹಂತವಾಗಿ ಡಿಜಿಟಲೀಕರಣ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ 5 ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿನ ದಾಖಲೆಗಳನ್ನು 25 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸುವುದಾಗಿ ತಿಳಿಸಿದ್ದಾರೆ.
ವಾಹನ ಸಂಚಾರ ಮೇಲ್ವಿಚಾರಣೆ ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಪತ್ತೆ ಹಚ್ಚಲು ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚ ಮಾಡಿ ಕೃತಕ ಬುದ್ಧಿಮತ್ತೆ ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳನ್ನು ಖರೀದಿ ಮಾಡುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರಗತಿಯಲ್ಲಿರುವ 42 ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣವನ್ನು ಪೂರ್ಣಗೊಳಿಸುವ ಜೊತೆಗೆ ಮುಂದಿನ ವರ್ಷ 20 ಕೋಟಿ ರೂ. ವೆಚ್ಚದಲ್ಲಿ ಹೊನ್ನಾವರ, ಚಾಮರಾಜನಗರ, ಚಿತ್ರದುರ್ಗದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ನಿರ್ಮಿಸುವುದಾಗಿ ತಿಳಿಸಿದ್ದಾರೆ.
ಬಿಎಂಟಿಸಿಗೆ 9 ಸಾವಿರ ಕೋಟಿ ರೂ. ವೆಚ್ಚದಲ್ಲಿ 14.750 ಹೊಸ ವಿದ್ಯುತ್ ಚಾಲಿತ ಬಸ್‌ಗಳನ್ನು ಸೇರ್ಪಡೆ ಮಾಡಲಾಗುತ್ತಿದೆ. 1 ಸಾವಿರ ಡೀಸಲ್ ಬಸ್‌ಗಳನ್ನು ಜಿಸಿಸಿ ಆಧಾರದಲ್ಲಿ ಸೇರ್ಪಡೆ ಮಾಡಲಾಗುತ್ತಿದೆ, ಸಾರಿಗೆ ನಿಗಮಗಳು 2 ಸಾವಿರ ಕೋಟಿ ರೂ. ಸಾಲ ಪಡೆಯಲು ಸರ್ಕಾರದ ಖಾತ್ರಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಬೆಂಗಳೂರು ಪೂರ್ವ ವಿಭಾಗದ ಕೆ.ಆರ್.ಪುರಂನಲ್ಲಿ ಕೆಂಗೇರಿ ಮಾದರಿಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸುವುದಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿಯವರು ತವರೂರು ಮೈಸೂರಿನ ಬನ್ನಿಮಂಟಪದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಬಸ್ ನಿಲ್ದಾಣ ನಿರ್ಮಿಸುವುದಾಗಿ ಹೇಳಿದ್ದಾರೆ.