ಬೆಂಗಳೂರು,ಮಾ.10- ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ರನ್ಯಾ ರಾವ್ ಅವರಿಗೆ ಬಿಜೆಪಿ ನಂಟಿದೆ. ಅದನ್ನು ದಿಕ್ಕು ತಪ್ಪಿಸಲು ಕಾಂಗ್ರೆಸ್ ಸಚಿವರ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ರನ್ಯಾರಾವ್ ಅವರಿಗೆ 12 ಎಕರೆ ಜಮೀನು ಮಂಜೂರು ಮಾಡಲಾಗಿತ್ತು ಎಂಬ ಆರೋಪಗಳಿವೆ. ಅವರು ಸಿಕ್ಕಿಬೀಳುವ ಭಯದಿಂದ ಬೇರೆಯವರ ಮೇಲೆ ಆರೋಪ ಮಾಡಿಬಿಡುತ್ತಾರೆ ಎಂದು ತಿರುಗೇಟು ನೀಡಿದರು.
ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ಹೆಸರನ್ನು ಬಹಿರಂಗಪಡಿಸಲಿ. ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ. ಯಾರು ರನ್ಯಾ ರಾವ್ ಅವರಿಗೆ ಬೆಂಬಲ ನೀಡಿದ್ದಾರೆ ಎಂಬುದನ್ನು ಹೆಸರು ಸಹಿತ ಹೇಳಲಿ. ಸದ್ಯಕ್ಕೆ ಸಿಬಿಐ ತನಿಖೆ ನಡೆಯುತ್ತದೆ. ಎಲ್ಲಾ ದೃಷ್ಟಿಕೋನದಿಂದಲೂ ತನಿಖೆ ನಡೆಸಿ ಸತ್ಯಾಂಶ ಹೊರಹಾಕಲಿ ಎಂದು ಸವಾಲು ಹಾಕಿದರು.
ಕಳೆದ 2 ವರ್ಷದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸಚಿವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಾ ಬಂದಿದ್ದಾರೆ. ಅದರಲ್ಲಿ ಯಾವುದೂ ಕೂಡ ಸತ್ಯ ಆಗಿಲ್ಲ. ಜನಪರವಾದ ಒಂದು ವಿಚಾರವನ್ನೂ ಬಿಜೆಪಿಯವರು ಚರ್ಚೆಗೆ ತೆಗೆದುಕೊಂಡಿಲ್ಲ. ಕೇವಲ ರಾಜಕೀಯ ಕಾರಣಕ್ಕಾಗಿಯೇ ಟೀಕೆ, ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದು ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸಭೆ ಸಮಾರಂಭಗಳಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಒಗ್ಗಟ್ಟಿನ ನಿರ್ಣಯ ಕೈಗೊಳ್ಳುತ್ತಿದ್ದಾರೆ. ಸಣ್ಣ ಪ್ರಮಾಣದ ವ್ಯತ್ಯಾಸಗಳೂ ಕೂಡ ಇಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನಮ ಮಾರ್ಗದರ್ಶಕರಾಗಿದ್ದು ಅವರು ಭಾಷಣದ ನಡುವೆ ಮಾರ್ಮಿಕವಾಗಿ ಮಾತನಾಡಿದ್ದಾರೆ. ಅದನ್ನೇ ಬೇರೆ ರೀತಿ ವ್ಯಾಖ್ಯಾನಿಸುತ್ತಿರುವುದು ಸರಿಯಲ್ಲ ಎಂದರು.