Thursday, March 20, 2025
Homeರಾಜ್ಯಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ : ಸಚಿವ ಕೃಷ್ಣಭೈರೇಗೌಡ

ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ : ಸಚಿವ ಕೃಷ್ಣಭೈರೇಗೌಡ

Strict action to clear government land encroachment

ಬೆಂಗಳೂರು,ಮಾ.19- ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ವಿಧಾನಪರಿಷತ್‌ಗೆ ತಿಳಿಸಿದರು. ಜೆಡಿಎಸ್‌‍ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗೋಮಾಳ, ಕೆರೆ ಸೇರಿದಂತೆ ಸರ್ಕಾರಿ ಭೂ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ ಎಂದರು.

ಪ್ರತಿ ತಾಲ್ಲೂಕಿನಲ್ಲೂ ನಕಲಿ ದಾಖಲೆ ಸೃಷ್ಟಿಸಿ ಬೇರೊಬ್ಬರಿಗೆ ಸರ್ಕಾರಿ ಭೂಮಿ ಮಾರಾಟ ಮಾಡಲು ಅವಕಾಶವಿಲ್ಲದಂತೆ ನಿರ್ಬಂಧಿಸಲು ಸೂಕ್ತ ಕಾನೂನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು . ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರತಿ ತಾಲ್ಲೂಕಿನಲ್ಲೂ ವಾರಕ್ಕೆ ಎರಡು ಬಾರಿ ಕೈಗೊಳ್ಳಲು ಸೂಚಿಸಲಾಗಿದೆ. ಈಗಾಗಲೇ ಈ ಕಾರ್ಯ ಆರಂಭವಾಗಿದ್ದು, ಮತ್ತಷ್ಟು ಶೀಘ್ರಗೊಳಿಸಲಾಗುವುದು ಎಂದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ 272 ದೂರುಗಳು ಬಂದಿವೆ. ಮಾರ್ಗಸೂಚಿ ಮತ್ತು ಮಾರುಕಟ್ಟೆ ಬೆಲೆಯಂತೆ ನಗರ ಜಿಲ್ಲೆಯ ವಿವಿಧ ಗ್ರಾಮಗಳ ಸರ್ಕಾರಿ ಜಮೀನಿಗೆ ಒಂದೊಂದು ಮೌಲ್ಯ ನಿಗದಿಪಡಿಸಲಾಗಿದೆ. ಒತ್ತುವರಿ ಮಾಡಿಕೊಂಡಿರುವವರಿಗೆ ನೋಟಿಸ್‌‍ ನೀಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿ ಹಂತ ಹಂತವಾಗಿ ತೆರವುಗೊಳಿಸಲಾಗುತ್ತದೆ.

ತಹಸೀಲ್ದಾರ್‌ ಹಂತದಲ್ಲಿ ಒತ್ತುವರಿದಾರರ ವಿರುದ್ಧ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ವಹಿಸಲಾಗಿದೆ. ಒತ್ತುವರಿದಾರರ ವಿರುದ್ಧ ಪೊಲೀಸ್‌‍ ಠಾಣೆಯಲ್ಲೂ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುತ್ತಿದೆ. ಒಟ್ಟು 136 ಎಕರೆ ಜಮೀನನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.ಒತ್ತುವರಿ ತೆರವುಗೊಳಿಸಿದ ಜಮೀನುಗಳನ್ನು ಸಾರ್ವಜನಿಕ ಉದ್ದೇಶಗಳಿಗೆ ಕಾಯ್ದಿರಿಸಲಾಗುತ್ತದೆ ಎಂದರು.

RELATED ARTICLES

Latest News