ಕೊಡಗು,ಮಾ.28- ಒಂದೇ ಕುಟುಂಬದ ದಂಪತಿ ಹಾಗೂ ತಾಯಿ-ಮಗಳನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗೂರು ಗ್ರಾಮದ ಕರಿಯ(75), ಗೌರಿ(70) ದಂಪತಿ ಹಾಗೂ ನಾಗಿ(30) ಮತ್ತು ಇವರ ಮಗಳು ಕಾವೇರಿ(5) ಕೊಲೆಯಾದವರು. ಇಂದು ಬೆಳಗ್ಗೆ ಮನೆಯಲ್ಲಿಯೇ ಜಗಳ ನಡೆದು ಈ ನಾಲ್ವರನ್ನು ಕತ್ತಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.
ಗಿರೀಶ್ ಎಂಬಾತನೇ ಈ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಶಂಕಿಸಿರುವ ಪೊಲೀಸರು ಆತನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಎಸ್‌ಪಿ ರಾಮರಾಜನ್ ಹಾಗೂ ಪೊನ್ನಂಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ಸ್ಥಳೀಯರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಕೌಟುಂಬಿಕ ಕಲಹ ಅಥವಾ ಆನೈತಿಕ ಸಂಬಂಧದ ಹಿನ್ನಲೆಯಲ್ಲಿ ಈ ಭೀಕರ ಹತ್ಯೆ ನಡೆದಿರಬಹುದೆಂದು ಶಂಕಿಸಲಾಗಿದೆ. ಆರೋಪಿ ಸಿಕ್ಕಿದ ನಂತರ ಘಟನೆಗೆ ನಿಖರ ಕಾರಣ ತಿಳಿದುಬರಲಿದೆ.