ಹುಬ್ಬಳ್ಳಿ,ಏ.8 – ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪೊಲೀಸರ ರಿವಾಲ್ವರ್ ಸದ್ದು ಮಾಡಿದ್ದು, ರೌಡಿ ಶೀಟರ್ ಗುಂಡೇಟಿನಿಂದ ಗಾಯಗೊಂಡಿದ್ದಾನೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಮಲ್ಲಿಕ್ ತಾಜುದ್ದೀನ್ ಅದೋನಿ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ರೌಡಿಗಳ ನಡುವೆ ಗಲಾಟೆಯಾಗಿತ್ತು. ಆ ವೇಳೆ ಆಟೋಚಾಲಕನಾಗಿರುವ ರೌಡಿ ಮಲ್ಲಿಕ್‌ನನ್ನು ಪೊಲೀಸರು ಬಂಧಿಸಿದ್ದರು. ಇಂದು ಮುಂಜಾನೆ ಸ್ಥಳ ಮಹಜರಿಗಾಗಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ವಿಶ್ವನಾಥ್ ಆಲದಮಟ್ಟಿ ಮತ್ತು ಸಿಪಿಐ ಶರೀಫ್ ನದಾಫ್ ಹಾಗೂ ಸಿಬ್ಬಂದಿ ರಾಘವೇಂದ್ರ ಕಾಲೋನಿಯ ಸ್ಮಶಾನದ ಬಳಿ ರೌಡಿಯನ್ನು ಕರೆದೊಯ್ದಿದ್ದಾರೆ.
ಆ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಕ್ಷಣ ಪಿಎಸ್‌ಐ ಅವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಎಚ್ಚರಿಸಿದ್ದಾರೆ. ಪೊಲೀಸರ ಮಾತನ್ನು ಲೆಕ್ಕಿಸದೆ ಮತ್ತೆ ದಾಳಿ ಮಾಡಿದಾಗ ಆತ್ಮರಕ್ಷಣೆಗಾಗಿ ಹಾರಿಸಿದ ಗುಂಡು ರೌಡಿ ಕಾಲಿಗೆ ತಗುಲಿದ್ದು, ಆತ ಕುಸಿದು ಬಿದ್ದಿದ್ದಾನೆ.
ತಕ್ಷಣ ರೌಡಿಯನ್ನು ಸುತ್ತುವರಿದು ವಶಕ್ಕೆ ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ. ಕಾರ್ಯಾಚರಣೆ ವೇಳೆ ಗಾಯಗೊಂಡಿರುವ ಪಿಎಸ್‌ಐ ಅವರೂ ಸಹ ಆಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.