ಬೆಂಗಳೂರು,ನ.9- ಸರ್ಕಾರದಲ್ಲಿ ಎಲ್ಲವೂ ಸುಗಮವಾಗಿದೆ ಎಂದು ಹೇಳುತ್ತಲೇ ಒಬ್ಬರಾದ ನಂತರ ಒಬ್ಬರಂತೆ ಬೆಳಗಾವಿಯ ಸಾಹುಕಾರರನ್ನು ಸಮಾಧಾನಪಡಿಸಲು ಯತ್ನಿಸುತ್ತಿರುವುದು ತೀವ್ರ ಕುತೂಹಲ ಕೆರಳಿಸಿದೆ. ನಿನ್ನೆ ರಾತ್ರಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಹಸ್ಯ ಮಾತುಕತೆ ನಡೆಸಿದ್ದಾರೆ.
ಒಂದೆಡೆ ಆಪರೇಷನ್ ಕಮಲ ಚಾಲ್ತಿಯಲ್ಲಿದೆ. ಮತ್ತೊಂದೆಡೆ ಬೆಳಗಾವಿ ಜಿಲ್ಲೆಯಲ್ಲಿ ಸಮಸ್ಯೆಗಳಿರುತ್ತವೆ, ಬಗೆಹರಿಯುತ್ತವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳುತ್ತಾರೆ. ಮತ್ತೊಂದೆಡೆ ನಮ್ಮಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಪರಿಸ್ಥಿತಿಯನ್ನು ಸರಿದೂಗಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಎರಡು ದಿನಗಳ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಏಕಾಏಕಿ ಸತೀಶ್ ಜಾರಕಿಹೊಳಿ ಅವರ ಮನೆಗೆ ಭೇಟಿ ನೀಡಿದ್ದರು. ಎಲ್ಲವೂ ಸರಿ ಇದೆ ಎಂದು ಹೇಳುತ್ತಲೇ ತೆರೆಮರೆಯಲ್ಲಿ ಸಾಕಷ್ಟು ಗೊಂದಲಗಳನ್ನು ಕಾಂಗ್ರೆಸ್ ತೋರಿಸಿಕೊಳ್ಳುತ್ತಿದೆ. ಸತೀಶ್ ಜಾರಕಿಹೊಳಿಯವರು ತಮ್ಮ ಕುಟುಂಬದ ಸದಸ್ಯರಿಗೆ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ಪೂರಕವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ತಮ್ಮ ಪುತ್ರನಿಗೆ ಚುನಾವಣೆಯಲ್ಲಿ ಸ್ರ್ಪಸಲು ಅವಕಾಶ ನೀಡಬೇಕೆಂದು ಪ್ರಸ್ತಾವನೆ ಮುಂದಿಡುವ ಮೂಲಕ ಪೈಪೋಟಿಗಿಳಿದಿದ್ದಾರೆ ಎಂದು ಹೇಳಲಾಗಿದೆ.
ನನ್ನ ಪ್ರಕಾರ ಭಾರತ ಮತ್ತು ಪಾಕಿಸ್ತಾನ ಸೆಮಿಫೈನಲ್ : ಗಂಗೂಲಿ
ಜಾರಕಿಹೊಳಿ ಕುಟುಂಬದ ಜೊತೆ ಲಕ್ಷ್ಮಿಹೆಬ್ಬಾಳ್ಕರ್ ಪೈಪೋಟಿ ನಡೆಸುತ್ತಿರುವುದು ಜಿಲ್ಲಾ ರಾಜಕಾರಣದಲ್ಲಿ ಸಾಕಷ್ಟು ಏರಿಳಿತಗಳಿಗೆ ಕಾರಣವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪದೇ ಪದೇ ಜಿಲ್ಲಾ ರಾಜಕಾರಣದಲ್ಲಿ ಹಸ್ತಕ್ಷೇಪ ನಡೆಸುತ್ತಿರುವುದು ಕೂಡ ಬೆಂಕಿಗೆ ತುಪ್ಪ ಸುರಿದಂತಾಗಿವೆ ಎಂಬ ವ್ಯಾಖ್ಯಾನಗಳಿವೆ.
ನಿನ್ನೆ ರಾತ್ರಿ ನಡೆದ ಸಭೆಯಲ್ಲಿ ಸತೀಶ್ ಜಾರಕಿಹೊಳಿಯವರು ಮುಖ್ಯಮಂತ್ರಿಯವರಿಗೆ ಪರಿಸ್ಥಿತಿಯನ್ನು ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.