ದೊಡ್ಡಬಳ್ಳಾಪುರ,ಏ.13 – ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಇಂದು ಬೆಳಿಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮ ಪತ್ನಿಯೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರಿನ ಪ್ರಸಿದ್ದ ಆದಿಶಕ್ತಿ ದೌಪದಮ್ಮು ಐತಿಹಾಸಿಕ ಕರಗ ಶಕ್ರೋತ್ಸವ ಹಾಗೂ ಧರ್ಮರಾಯಸ್ವಾಮಿ ಕರಗೋತ್ಸವದಲ್ಲಿ ಪಾಲ್ಗೊಂಡ ಬಳಿಕ ದೊಡ್ಡಬಳ್ಳಾಪುರದ ಘಾಟಿ ಕ್ಷೇತ್ರಕ್ಕೆ ಭೇಟಿ ನೀಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕಂಟನಕುಂಟೆ ಬಳಿ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಶರತ್ ಪಾಟೀಲ್ ನೇತೃತ್ವದ ಪದಾಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಸ್ವಾಗತ ಕೋರಿದರು.
ಬಳಿಕ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಡಿಸಿಎಂ ದಂಪತಿಗಳಿಗೆ ದೇವಾಲಯದ ಆಡಳಿತ ಮಂಡಳ ಅದ್ಧೂರಿ ಸ್ವಾಗತ ಕೋರಿ, ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಪೂಜೆ ಸಲ್ಲಿಸಲಾಯಿತು.
ರಾಜಕೀಯ ವಿದ್ಯಮಾನಗಳ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿಗಳು, ಪವಿತ್ರ ಕ್ಷೇತ್ರಕ್ಕೆ ಬಂದಿದ್ದೇವೆ. ಇಲ್ಲಿ ರಾಜಕೀಯ ಮಾತನಾಡುವುದು ಬೇಡ. ಈ ಬಾರಿ ಉತ್ತಮ ಮಳೆ, ಬೆಳೆಯಾಗಿ ಸುಭೀಕ್ಷೆಯಿಂದಿರಲಿ ಎಂದು ದೇವರಲ್ಲಿ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.