ಬೆಂಗಳೂರು, ಏ.17-ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕಾಗಿದ್ದು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಸಂಜೆ ಹಾಗೂ ರಾತ್ರಿ ವೇಳೆ ರಾಜ್ಯದ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಮಿಂಚು, ಗುಡುಗಿನಿಂದ ಕೂಡಿದ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ನಿನ್ನೆ ರಾಜಧಾನಿ ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾವೇರಿ, ಇಳಕಲ್, ಆನವಟ್ಟಿ ಸೇರಿದಂತೆ ರಾಜ್ಯದ ಒಳನಾಡಿನ ಹಲವೆಡೆ ಚದುರಿದಂತೆ ಮಳೆಯಾಗಿದೆ.
ಕೆಲವೆಡೆ ಮಿಂಚು, ಗುಡುಗಿನಿಂದ ಕೂಡಿದ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಿದೆ. ಆದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಕಲಬುರಗಿ ಸೇರಿದಂತೆ ಆ ಭಾಗದ ಹಲವೆಡೆ ಗರಿಷ್ಠ ತಾಪಮಾನ 40 ಡಿ.ಸೆಂ.ಗಿಂತ ಹೆಚ್ಚಾಗಿದೆ. ದಕ್ಷಿಣ ಒಳನಾಡಿನಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕೆಲವೆಡೆ ತಾಪಮಾನದಲ್ಲಿ 2-3 ಡಿ.ಸೆಂ.ನಷ್ಟು ಕಡಿಮೆಯಾಗಿದ್ದು, ಬೇಸಿಗೆಯಲ್ಲೂ ತಂಪಾದ ವಾತಾವರಣ ಕಂಡುಬರುತ್ತಿದೆ.
ಏಪ್ರಿಲ್ ತಿಂಗಳಲ್ಲಿ ಇದುವರೆಗೂ ರಾಜ್ಯದಾದ್ಯಂತ ವಾಡಿಕೆ ಪ್ರಮಾಣದ ಮಳೆಯಾಗಿದೆ. ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಬೇಸಿಗೆ ಮಳೆ ಚದುರಿದಂತೆ ಬೀಳುತ್ತಿದೆಯೇ ಹೊರತು ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಇದರಿಂದ ವಾತಾವರಣದಲ್ಲಿ ಏರುಪೇರುಗಳು ಕಂಡುಬರುತ್ತಿವೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.