ಬೆಂಗಳೂರು, ಏ.18– ಬೀದರ್‌ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದೇ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆದು ದರ್ಪ ಮೆರೆದು ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿದ ಅಧಿಕಾರಿ, ಸಿಬ್ಬಂದಿಗಳ ವಿರುದ್ದ ತಕ್ಷಣವೇ ಶಿಸ್ತು ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿ ಹಿಂದೂ ಸಂಪ್ರದಾಯದ ಆಚಾರ ವಿಚಾರವನ್ನು ಅಪಮಾನಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಂದಾಗಬೇಕು. ಸನಾತನ ಹಿಂದೂ ಧರ್ಮದ ಆಚಾರ ವಿಚಾರಗಳಿಗೆ ಮಾರ್ಗದರ್ಶನ ತೋರುವ ಸಭ್ಯ ಬ್ರಾಹ್ಮಣ ಸಮುದಾಯವನ್ನು ಅಪಮಾನಿಸಿರುವ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ.
ಬೀದರ್‌ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದೇ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆಯಲು ದರ್ಪ ಮೆರೆದ ವರ್ತನೆ ಅತ್ಯಂತ ಹೇಯ. ಈ ರೀತಿಯ ಬೌದ್ಧಿಕ ವಿಕೃತಿ ಹಾಗೂ ಮನುಷ್ಯತ್ವ ಇಲ್ಲದ ನಡೆ ಇನ್ನೊಂದಿರಲಾರದು, ಇದು ಕಾಂಗ್ರೆಸ್ ಸರ್ಕಾರದ ಹೀನ ಮನಃಸ್ಥಿತಿಯ ಮುಖವಾಡವನ್ನು ಪ್ರದರ್ಶಿಸಿದೆ.
ಬಾಲ್ಯದಿಂದಲೂ ಕನಸು ಕಟ್ಟಿಕೊಂಡು ಭವಿಷ್ಯದ ತಿರುವಿನಲ್ಲಿ ಆಘಾತ ಎದುರಿಸಿ ವಿದ್ಯಾರ್ಥಿಯೊಬ್ಬನ ಎಂಜಿನಿಯರಿಂಗ್ ಪದವಿಯ ಕನಸಿನ ಮೇಲೆ ಅಟ್ಟಹಾಸಗೈದ ಸಿಇಟಿ ಪರೀಕ್ಷಾ ಸಿಬ್ಬಂದಿಯ ವರ್ತನೆ ಅತ್ಯಂತ ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.
ಪರೀಕ್ಷೆ ಹಾಗೂ ಸಂದರ್ಶನ ಎದುರಿಸುವ ವೇಳೆ ಕೆಲ ವಸ್ತುಗಳನ್ನು ಕೊಂಡೊಯ್ಯುವುದು ನಿಷಿದ್ಧ, ಆದರೆ ಜನಿವಾರ ತೊಡುವುದು ಒಂದು ಕುಟುಂಬ ಹಾಗೂ ಭಾರತೀಯ ಸಮುದಾಯದ ಆಚಾರ ವಿಚಾರಕ್ಕೆ ಸಂಬಂಧಿಸಿದ್ದು, ವಿದ್ಯಾರ್ಥಿ ಬರೆಯುವ ಪರೀಕ್ಷೆಯ ಮೇಲೆ ಜನಿವಾರ ಏನು ಪ್ರಭಾವ ಅಥವಾ ಪರಿಣಾಮ ಬೀರುತ್ತದೆ? ಎಂಬುದಕ್ಕೆ ಸಂಬಂಧಿಸಿದ ಸಚಿವರು ಹಾಗೂ ಸರ್ಕಾರ ಉತ್ತರಿಸಬೇಕು. ಶಿಕ್ಷಣವೆಂದರೆ ಸಂಸ್ಕಾರ, ಅದು ಇಲ್ಲದವರು ಶಿಕ್ಷಣ ಖಾತೆಯನ್ನು ನಿರ್ವಹಿಸಿದರೆ ಏನು ಪರಿಣಾಮ ಬೀರಬಹುದು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಪರೋಕ್ಷವಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ವಿರುದ್ದವೂ ವಿಜಯೇಂದ್ರ ಕಿಡಿಕಾರಿದ್ದಾರೆ.
ಜನಿವಾರ ತೆಗೆಸಿದ ಪ್ರಕರಣ ಕ್ಷಮೆಯಾಚನೆಗೆ ಬ್ರಾಹಣ ಮಹಾಸಭಾ ಆಗ್ರಹ
ತೀರ್ಥಹಳ್ಳಿ ಹಾಗೂ ಬೀದರ್‌ನಲ್ಲಿ ಬ್ರಾಹಣ ಸಮುದಾಯದ ವಿದ್ಯಾರ್ಥಿಗಳಿಗೆ ಜನಿವಾರ ಧರಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅವಮಾನ ಮಾಡಿ ಅಮಾನವೀಯವಾಗಿ ವರ್ತಿಸಿದ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಂಡು ಬೇಷರತ್ ಕ್ಷಮೆಯಾಚಿಸಬೇಕೆಂದು ಅಖಿಲ ಕರ್ನಾಟಕ ಬ್ರಾಹಣ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್ ಒತ್ತಾಯಿಸಿದ್ದಾರೆ.
ಕೂಡಲೇ ಶಿಸ್ತುಕ್ರಮ ಕೈಗೊಂಡು ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಕೈಗೆ ಕಟ್ಟಿದ್ದ ದಾರ ಹಾಗೂ ಜನಿವಾರಗಳನ್ನು ಬಿಚ್ಚಿಸಿ ಅಧಿಕಾರಿ ವರ್ತಿಸಿದ ರೀತಿ ಖಂಡನೀಯವಾಗಿದ್ದು, ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳ ಅತಸ್ಥೈರ್ಯವನ್ನು ಕುಗ್ಗಿಸುವ ನಿಟ್ಟಿನಲ್ಲಿ ಇಂತಹ ಸಣ್ಣ ಬುದ್ಧಿಯನ್ನು ತೋರುವ ಇವರ ನಡವಳಿಕೆ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಜನಿವಾರ ತೆಗೆಸಿದವರ ವಿರುದ್ಧ ಕಾನೂನು ಕ್ರಮ : ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಲು ಯತ್ನಿಸಿರುವ ಆರೋಪದ ಎರಡು ಪ್ರತ್ಯೇಕ ಪ್ರಕರಣಗಳ ಬಗ್ಗೆ ಸಮಗ್ರ ವರದಿ ಪಡೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಿವಾರ ತೆಗೆದು ಪರೀಕ್ಷೆ ಬರೆಯಬೇಕು ಎಂಬ ನಿಯಮವಿಲ್ಲ. ಎಲ್ಲರ ಸಂಪ್ರದಾಯವನ್ನು ಗೌರವಿಸಬೇಕು ಎಂದಿದ್ದಾರೆ.ಬೀದರ್‌ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆದು ಸಿಇಟಿ ಪರೀಕ್ಷೆ ಬರೆಯುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಆ ವಿದ್ಯಾರ್ಥಿ ಪರೀಕ್ಷೆ ಬರೆಯದೇ ವಾಪಸ್ಸು ಹೋಗಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬರ ಜನಿವಾರ ಕಿತ್ತು ಹಾಕಲಾಗಿದೆ ಎಂಬ ಆರೋಪಗಳಿವೆ. ಈ ಬಗ್ಗೆ ಸಮಗ್ರ ವರದಿ ನೀಡಲು ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಾಧಿಕಾರದ ಕಾರ್ಯನಿರ್ವಾಹಕ ಅಧಿಕಾರಿ ಸುಸೂತ್ರವಾಗಿ ಸಿಇಟಿ ಪರೀಕ್ಷೆ ನಡೆದಿದೆ ಎಂಬ ಮಾಹಿತಿ ನೀಡಿದ್ದರು. ಜನಿವಾರದ ವಿಚಾರದಲ್ಲಿ ನಡೆದಿದೆ ಎನ್ನಲಾದ ಘಟನೆಯ ಬಗ್ಗೆ ಕಾರ್ಯನಿರ್ವಾಹಕ ಅಧಿಕಾರಿಯಿಂದ ವರದಿ ಕೇಳಲಾಗಿದೆ. ಅವರು ವರದಿ ಕೊಟ್ಟ ನಂತರ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಜನಿವಾರ ತೆಗೆಸಲು ಯತ್ನಿಸಿರುವ ಹಾಗೂ ಜನಿವಾರ ಕಿತ್ತು ಹಾಕಲಾಗಿದೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ರೀತಿಯ ಘಟನೆ ಒಪ್ಪುವಂತದ್ದಲ್ಲ. ಅಖಿಲ ಕರ್ನಾಟಕ ಬ್ರಾಹಣ ಮಹಾಸಭಾದವರು ಈ ಘಟನೆಯನ್ನು ಖಂಡಿಸಿದ್ದಾರೆ ಎಂದ ಅವರು, ಇಂತಹ ಘಟನೆ ನಡೆದಿರುವುದು ನಿಜವಾದರೆ, ಅದು ಅತಿರೇಕದ ವರ್ತನೆಯಾಗಲಿದೆ. ಎರಡು ಪರೀಕ್ಷಾ ಕೇಂದ್ರಗಳನ್ನು ಹೊರತುಪಡಿಸಿ ರಾಜ್ಯದಲ್ಲಿ ಎಲ್ಲೂ ಇಂತಹ ಘಟನೆ ವರದಿಯಾಗಿಲ್ಲ ಎಂದಿದ್ದಾರೆ.
ಪರೀಕ್ಷೆ ಬರೆಯದೇ ಇರುವ ವಿದ್ಯಾರ್ಥಿಗೆ ಯಾವ ರೀತಿ ಪರಿಹಾರ ಕಲ್ಪಿಸಬಹುದು ಎಂಬ ಬಗ್ಗೆ ವರದಿ ಬಂದ ನಂತರ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ನಿರ್ಧರಿಸಲಾಗುವುದು. ಇದೊಂದು ವಿಶೇಷ ಪ್ರಕರಣವಾಗಿದೆ ಎಂದು ಅವರು ಹೇಳಿದ್ದಾರೆ.
ಪರೀಕ್ಷೆ ನಡೆಸುವ ಹೊಣೆಗಾರಿಕೆಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿತ್ತು. ಪರೀಕ್ಷಾ ಅಕ್ರಮ ತಡೆಯಲು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಅಲ್ಲದೆ, ಯಾರಿಗೂ ಪರೀಕ್ಷೆ ತಪ್ಪಬಾರದು ಎಂಬ ಕಾರಣಕ್ಕೆ ವಿದ್ಯಾರ್ಥಿಗಳ ಮನವಿಗಳನ್ನು ಪರಿಗಣಿಸಲಾಗಿದೆ. ಈ ವಿಚಾರದಲ್ಲಿ ರಾಜಕೀಯ ಲಾಭ ಪಡೆಯುವ ಮನಃಸ್ಥಿತಿಯಲ್ಲಿ ನಾವು ಇಲ್ಲ ಎಂದು ಅವರು ತಿಳಿಸಿದ್ದಾರೆ.
ಜಾತಿ ಗಣತಿ ವಿಚಾರದಲ್ಲಿ ಸಂಪುಟ ಸಭೆಯಲ್ಲಿ ಚರ್ಚೆ ಅಪೂರ್ಣವಾಗಿದೆ. ಯಾರೂ ಭಿನ್ನಾಭಿಪ್ರಾಯ ವ್ಯಕ್ತಪಡಿಸಿಲ್ಲ. ಮುಕ್ತವಾಗಿ ಎಲ್ಲರೂ ಅವರವರ ಅಭಿಪ್ರಾಯ ಹೇಳಿದ್ದಾರೆ. ಮುಂದಿನ ಸಂಪುಟ ಸಭೆಯಲ್ಲಿ ಕ್ರೋಡೀಕರಿಸಿದ ಅಭಿಪ್ರಾಯ ಮಂಡಿಸಲು ಸಚಿವರಿಗೆ ತಿಳಿಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.