ಬೆಂಗಳೂರು, ಏ.27- ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚೇತರಿಕೆ ಕಂಡಿದೆ. ಜೊತೆಗೆ ಗರಿಷ್ಠ ತಾಪಮಾನವೂ ಏರಿಕೆಯಾಗುತ್ತಿದೆ. ರಾಜ್ಯದ ಕೆಲವೆಡೆ ಚದುರಿದಂತೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗುತ್ತಿದೆ. ಅದೇ ರೀತಿ ಗರಿಷ್ಠ ತಾಪಮಾನ 35 ಡಿ.ಸೆಂ.ಗಿಂತಲೂ ಹೆಚ್ಚಾಗುತ್ತಿದೆ.
ಒಂದೆಡೆ ಮಳೆ, ಮತ್ತೊಂದೆಡೆ ಬಿರುಬಿಸಿಲು ಎನ್ನುವಂತಹ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಬಾಗಲಕೋಟೆ, ಮಡಿಕೇರಿ, ಹುಬ್ಬಳ್ಳಿ, ಮಂಗಳೂರು, ಗದಗ, ಬಳ್ಳಾರಿ, ವಿಜಯನಗರ, ಪುತ್ತೂರು, ಬೆಳ್ತಂಗಡಿ ಸೇರಿದಂತೆ ಹಲವೆಡೆ ಚದುರಿದಂತೆ ಮಳೆಯಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಗರಿಷ್ಠ ತಾಪಮಾನ ಈಗಾಗಲೇ 40 ಡಿ.ಸೆಂ.ಗಿಂತ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಒಳಭಾಗದಲ್ಲಿ ಗರಿಷ್ಠ ತಾಪಮಾನ 35 ಡಿ.ಸೆಂ.ಗಿಂತ ಹೆಚ್ಚಾಗಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ 5 ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚು, ಸಿಡಿಲಿನ ಆರ್ಭಟವೂ ಕಂಡುಬರಲಿದೆ.
ಬಿರುಗಾಳಿಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಪ್ರತಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಸಾರ್ವಜನಿಕರು ಗುಡುಗು, ಮಿಂಚಿನ ಸಂದರ್ಭದಲ್ಲಿ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ಮಾಡಲಾಗಿದೆ.
ಬೆಂಗಳೂರು ಸುತ್ತಮುತ್ತ ಭಾಗಶಃ ಮೋಡ ಕವಿದ ವಾತಾವರಣವಿದ್ದು, 3 ದಿನಗಳ ಕಾಲ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. ಕೆಲವೆಡೆ ಗುಡುಗು, ಮಿಂಚಿನಿಂದ ಮಳೆಯಾಗುವ ನಿರೀಕ್ಷೆ ಇದೆ.