ದೇವನಹಳ್ಳಿ , ಏ.28- `ಶಾಂತಿ ಬೋಧಿಸಿದ ಬುದ್ಧ, ಬಸವರ ನಾಡು ನಮದು. ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ. ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ’ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ದೇವನಹಳ್ಳಿ ತಾಲ್ಲೂಕು ಭೈರದೇನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾತ್ ವತಿಯಿಂದ ನಡೆದ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, `ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ’ ಎಂದು ಹೇಳಿದರು.
`ಭಾರತ ಬುದ್ಧ, ಬಸವಣ್ಣ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ಧ ಎನ್ನುವ ಮಾತನ್ನು ನಿನ್ನೆ ನಾನು ಹೇಳ್ದೆಿ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುಳ್ಳೇ ಬಿಜೆಪಿ ಪ್ರಚಾರ ಮಾಡುತ್ತಿದೆ. ನನ್ನ ಮಾತನ್ನು ತಿರುಚಿ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ನನ್ನದಲ್ಲದ ಅಭಿಪ್ರಾಯವನ್ನು ತೋರಿಸುತ್ತಿದ್ದಾರೆ. ಇದು ತಪ್ಪು, ಇದಕ್ಕೆ ನಾನು ಹೊಣೆಗಾರನಲ್ಲ’ ಎಂದು ತಿಳಿಸಿದರು.
`ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರಾರು ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ. ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ನಮ ಸರ್ಕಾರದ ಅಭಿವೃದ್ಧಿ ಕಾಣುತ್ತದೆ’ ಎಂದು ನುಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ` ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ಹಿಂದುಳಿದವರಗೆ, ಎಲ್ಲಾ ವರ್ಗದವರೆಗೂ ಅನುಕೂಲವಾಗಿದೆ. ಆದರೆ ವಿರೋಧ ಪಕ್ಷದವರು ಸುಖಾಸುಮನೆ ಪ್ರತಿಭಟನೆ ಮಾಡ್ತಿದ್ದಾರೆ. ಕುಟುಂಬದ ಯಶಸ್ಸು, ಜೀವನದ ಯಶಸ್ಸಿಗೆ ನಾವು ಗ್ಯಾರಂಟಿಗಳನ್ನು ನೀಡಿದ್ದೇವೆ. ಎತ್ತಿನಹೊಳೆ ನೀರನ್ನು ಬಯಲು ಸೀಮೆ ಪ್ರದೇಶಗಳಿಗೆ ಹಾಗೂ ಬೆಂಗಳೂರು ಗ್ರಾಮಾಂತರ ಗ್ರಾಮಾಂತರ ಜಿಲ್ಲೆಗೆ ಆದಷ್ಟು ಶೀಘ್ರ ಹರಿಸಲಾಗುವುದು ‘ ಎಂದು ತಿಳಿಸಿದರು.
`ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವದ್ಧಿ ಮತ್ತು ಪ್ರಗತಿಗೆ ನಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆ ‘ ಎಂದು ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಕಂದಾಯ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ, ` ಚುನಾವಣಾ ಸಮಯದಲ್ಲಿ ಕೊಟ್ಟ ಮಾತಿನಂತೆ ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಜತೆಗೆ ಸಾವಿರಾರೂ ಕೋಟಿ ರೂ. ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾ ಜನಪರ ಮೆಚ್ಚುಗೆ ಗಳಿಸಿದೆ.
ಬೆಂಗಳೂರು ಗ್ರಾಮಾಂತರಕ್ಕೆ ಜಿಲ್ಲಾ ಕೇಂದ್ರ ಹಾಗೂ ಜಿಲ್ಲಾ ಆಡಳಿತ ಸಂಕೀರಣವನ್ನು ಮಾಡಿಸಿದ್ದು ಕಾಂಗ್ರೆಸ್ ಸರ್ಕಾರವೇ. ಜಿಲ್ಲೆಯ ಸರ್ವೋತೋಮುಖ ಅಭಿವೃದ್ಧಿಗೆ ನಮ ಸರ್ಕಾರದ ಸಹಕಾರ ಇರುತ್ತದೆ ‘ ಎಂದು ಹೇಳಿದರು.
ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹದ್ ಖಾನ್ ಮಾತನಾಡಿ, `ಜಿಲ್ಲೆಯ ವಸತಿ ರಹಿತ ಬಡವರಿಗಾಗಿ 2500 ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಜತೆಗೆ ಅಲ್ಪಸಂಖ್ಯಾತರ ಮದುವೆ-ಶುಭ ಸಮಾರಂಭಗಳ ಅನುಕೂಲಕ್ಕಾಗಿ 4 ಶಾದಿ ಮಹಲ್ ನಿರ್ಮಾಣಕ್ಕೆ ಮಂಜೂರು ನೀಡಿದೆ. ಸರ್ಕಾರ ಸದಾ ಜನಪರ ಆಡಳಿತದೊಂದಿಗೆ 2 ವರ್ಷವನ್ನು ಕಾಂಗ್ರೆಸ್ ಸರ್ಕಾರ ಪೂರೈಸುತ್ತಿದೆ’ ಎಂದು ಅವರು ನುಡಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಮಹದೇವಪ್ಪ, ಬೋಸುರಾಜು, ಶಾಸಕರಾದ ಶರತ್‌ಕುಮಾರ್ ಬಚ್ಚೇಗೌಡ, ಶ್ರೀನಿವಾಸ್, ಬೈಯಪ್ಪ ಅಧ್ಯಕ್ಷ ಶಾಂತಕುಮಾರ್, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಕೆ.ಎಂ.ಲಕ್ಷಿಕಾಂತ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ರೇವಣ್ಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಮುಂತಾದವರು ಉಪಸ್ಥಿತರಿದ್ದರು.