ದೊಡ್ಡಬಳ್ಳಾಪುರ, ಮೇ.8 – ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಘಾಟಿ ಕ್ಷೇತ್ರದಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ನಡೆದ ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 67 ಜೋಡಿ ನವ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮಾಂಗಲ್ಯ ಭಾಗ್ಯ ಯೋಜನೆಯಡಿ ವಧು-ವರರಿಗೆ ತಾಳಿ, ಕಾಲುಂಗುರ, ಎರಡು ಚಿನ್ನದ ಗುಂಡು, ಪಂಚೆ, ಶಲ್ಯಗಳನ್ನು ನೀಡಲಾಯಿತು.
ವಿವಾಹ ಮಹೋತ್ಸವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ವಹಿಸಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಸಿಇಒ ಕೆ.ಎನ್.ಅನುರಾಧ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್ ಸೇರಿದಂತೆ ತಾಲ್ಲೂಕಿನ ಎಲ್ಲ ಇಲಾಖಾ ಅಧಿಕಾರಿಗಳು ವಿವಾಹ ಮಹೋತ್ಸವಕ್ಕೆ ಸಾಕ್ಷಿಯಾಗಿ, ನವ ವಧು-ವರರಿಗೆ ಶುಭ ಹಾರೈಸಿದರು.
ದೇವರ ಸನ್ನಿಧಿಯಲ್ಲಿ ನಡೆಯುವ ಮಾಂಗಲ್ಯ ಭಾಗ್ಯದಂತಹ ಸಾಮೂಹಿಕ ವಿವಾಹ ಕಾರ್ಯಗಳು ಅರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ವರದಾನವಾಗಿದೆ.ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಲ್ಲ ದಂಪತಿಗಳು ಒಳ್ಳೆಯ ಜೀವನ ನಡೆಸುವಂತಾಗಲಿ, ಅವರಿಗೆ ಭಗವಂತ ಸಕಲೈಶ್ವರ್ಯ ಕೊಟ್ಟು ಕಾಪಾಡಲಿ ಎಂದು ಗಣ್ಯರು ನವ ಜೋಡಿಗಳಿಗೆ ಹರಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವೆಂಕಟರಮಣಯ್ಯ, ಪ್ರಾಧಿಕಾರದ ಕಾರ್ಯದರ್ಶಿ ನಾರಾಯಣಸ್ವಾಮಿ ಸೇರಿದಂತೆ ಪ್ರಾಧಿಕಾರದ ಸದಸ್ಯರು ಭಾಗವಹಿಸಿದ್ದರು.