ಬೆಂಗಳೂರು, ಮೇ.10- ಪೂರ್ವ ಮುಂಗಾರುಮಳೆ ಚೇತರಿಕೆ ಕಂಡಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ಗುಡುಗು, ಮಿಂಚಿನಿಂದ ಕೂಡಿದ ಹಗುರದಿಂದ ಸಾಧಾರಣ ಮಳೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಒಂದೆರೆಡು ಕಡೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಒಳನಾಡಿನಲ್ಲಿ ಟ್ರಫ್ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಮುನ್ನುಚನೆಗಳಿವೆ. ಉತ್ತರ ಒಳನಾಡಿನ ಒಂದೆರೆಡು ಕಡೆ ಗುಡುಗು, ಮಿಂಚಿನಿಂದ ಕೂಡಿದ ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಗಳಿವೆ.
ಗದಗ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ. ಕಲ್ಯಾಣ ಕರ್ನಾಟಕದ ಬೀದರ್ ಸೇರಿದಂತೆ ಕೆಲವೆಡೆ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಗುಡುಗು, ಮಿಂಚಿನಿಂದ ಕೂಡಿದ ಹಾಗೂ ಗಂಟೆಗೆ ಸುಮಾರು 50 ಕಿ.ಮೀ. ವೇಗದ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಗಳಿವೆ.
ಕೊಡಗು, ಹಾಸನ, ಮೈಸೂರು, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಕೆಲವೆಡೆ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆಗಳಿವೆ.
ಹೆಚ್ಚುಕಡಿಮೆ ಇದೇ ಪರಿಸ್ಥಿತಿ ಮುಂದಿನ 5 ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ. ಆದರೆ ವ್ಯಾಪಕವಾಗಿ ರಾಜ್ಯಾದ್ಯಂತ ಎಲ್ಲಾ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ವಿರಳ. ಪೂರ್ವ ಮುಂಗಾರು ಮಳೆಯಾಗಿರುವುದರಿಂದ ಗುಡುಗು, ಮಿಂಚು, ಸಿಡಿಲು, ಆಲಿಕಲ್ಲು ಹಾಗೂ ಬಿರುಗಾಳಿ ಸಹಿತ ಕೆಲವೆಡೆ ಮಳೆಯಾಗುವುದು ಸಹಜ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸ್ಥಳೀಯ ಹವಾಮಾನ ಮುನ್ಸೂಚನೆ ಪ್ರಕಾರ ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.