ಬೆಂಗಳೂರು, ಮೇ 24 – ರಾಜ್ಯ ವಿಧಾನಮಂಡಲದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಧಾನಸೌಧದ ಭವ್ಯತೆಯನ್ನು ಮತ್ತು ವಿಧಾನಸಭೆಯ ಸಭಾಂಗಣ ವೀಕ್ಷಣೆಗಾಗಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸುವ ವಿಧಾನಸೌಧ ಗೈಡೆಡ್ ವಾಕಿಂಗ್ ಟೂರ್ ಕಾರ್ಯಕ್ರಮ ನಾಳೆ ಉದ್ಘಾಟನೆಯಾಗಲಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಪ್ರವಾಸೋದ್ಯಮ ಇಲಾಖೆ ಮತ್ತು ವಿಧಾನಸಭೆ ಸಚಿವಾಲಯದ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.
ವಿಧಾನಸೌಧವು ಬೆಂಗಳೂರು ನಗರದ ಆಕರ್ಷಣೀಯ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಇತ್ತೀಚಿನ ದಿನಗಳಲ್ಲಿ ಬೆಂಗಳೂರಿಗೆ ಭೇಟಿ ನೀಡುವ ದೇಶೀಯ ಹಾಗೂ ವಿದೇಶೀಯ ಪ್ರವಾಸಿಗರು ವಿಧಾನಸೌಧಕ್ಕೆ ಭೇಟಿ ನೀಡಲು ಉತ್ಸುಕರಾಗಿದ್ದಾರೆ. ಪ್ರತಿ ಪ್ರವಾಸಿಗರು ಕಟ್ಟಡದ ಹೊರಭಾಗದಲ್ಲಿ ನಿಂತು ವೀಕ್ಷಣೆ ಮಾಡುತ್ತಿದ್ದಾರೆ.