ಬೀದರ್/ಕೋಲಾರ ,ಫೆ.9-ಬೀದರ್ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ.ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲ್ಲೂಕಿನ ಹಳ್ಳಿಖೇಡ ಸಮೀಪದ ನಾಗಣ್ಣ ಕ್ರಾಸ್ ಬಳಿ ಸೇತುವೆಗೆ ಮೋಟಾರ್ ಸೈಕಲ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ರಾಜೇಶ್ವರ ಗ್ರಾಮದ ನಿವಾಸಿಗಳಾದ ವೆಂಕಟ್ ಕರತಲ್ (40), ಅವರ ಪತ್ನಿ ಶಿಲ್ಪಾ (35) ಮತ್ತು ಅವರ ಮಗಳು ರಕ್ಷಿತಾ (12) ಎಂದು ಗುರುತಿಸಲಾಗಿದೆ. ಅವರ ಮಗ ದಿಗಂಬರ್ (15) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ನಾಲ್ವರು ಮೋಟಾರ್ ಸೈಕಲ್ನಲ್ಲಿ ಪ್ರಯಾಣಿಸುತ್ತಿದ್ದಾಗ ಸವಾರ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೂರು ಕಾರ್ಮಿಕರ ಸಾವು:
ಮತ್ತೊಂದು ಅಪಘಾತದಲ್ಲಿ, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಕಾರು ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನುಆಂಧ್ರಪ್ರದೇಶದ ಮುನಿಯಮ ಮತ್ತು ವೆಂಕಟಪ್ಪ ಎಂದು ಗುರುತಿಸಲಾಗಿದ್ದು, ಮತ್ತೊಬ್ಬರ ಹೆಸರು ಸದ್ಯಕ್ಕೆ ತಿಳಿದು ಬಂದಿಲ್ಲ.
ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಆಂಧ್ರಪ್ರದೇಶದ ಮದನಪಲ್ಲಿಯಲ್ಲಿರುವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಕಾರ್ಮಿಕರು ದಿನಗೂಲಿ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
